ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯ ಸಪ್ತಾಹ ಆಚರಣೆ; ಪುಸ್ತಕ ಬದುಕಿಗೆ ಮಾರ್ಗದರ್ಶಕ: ದಿವಾಕರ್

Last Updated 28 ನವೆಂಬರ್ 2021, 6:08 IST
ಅಕ್ಷರ ಗಾತ್ರ

ದೇವನಹಳ್ಳಿ:‘ಮಾನವನ ಬದುಕಿಗೆ ಪುಸ್ತಕಗಳು ಸಾಕಷ್ಟು ಮಾರ್ಗದರ್ಶನ ನೀಡುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ದಿವಾಕರ್ ತಿಳಿಸಿದರು.

ಪಟ್ಟಣದ ಗಾಂಧಿ ಚೌಕದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

₹ 1.88 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿಸಲಾಗುತ್ತದೆ. ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕು. ಎಷ್ಟು ಓದುತ್ತೇವೆಯೋ ಅಷ್ಟು ಜ್ಞಾನ ಸಂಪಾದಿಸಬಹುದು ಎಂದರು.

ವಿದ್ಯಾರ್ಥಿಗಳು ಈಗಿನಿಂದಲೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಲು ಸಾಹಿತ್ಯಿಕ ವಾತಾವರಣ ಸೃಷ್ಟಿಸುವುದು ಅತಿ ಅವಶ್ಯಕ. ಪುಸ್ತಕಗಳು ಮನೆಯಲ್ಲಿದ್ದರೆ ಜ್ಞಾನದ ಭಂಡಾರವಿದ್ದಂತೆ. ಯುವಪೀಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪುಸ್ತಕ ಮತ್ತು ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡರೆ ಜ್ಞಾನ ಹೆಚ್ಚಾಗುತ್ತದೆ. ದೇಶ ಸುತ್ತು; ಕೋಶ ಓದು ಎಂಬ ನಾಣ್ಣುಡಿಯ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಚೀನ ಇತಿಹಾಸದ ಬಗ್ಗೆ ಅಧ್ಯಯನ ಅವಶ್ಯಕವಾಗಿದೆ. ಜೊತೆಗೆ ಪ್ರಚಲಿತ ವಿದ್ಯಮಾನಗಳತ್ತ ಹೆಚ್ಚಿನ ಸಮಯ ಮೀಸಲಿಡಬೇಕು. ಗ್ರಂಥ ಭಂಡಾರ ಜ್ಞಾನದ ನಿಧಿಯಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಆದ್ದರಿಂದ ಗ್ರಂಥಾಲಯವನ್ನು ಉನ್ನತಮಟ್ಟಕ್ಕೇರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು
ಹೇಳಿದರು.

ಯುವ ವಿದ್ಯಾವಂತರು ಮೊಬೈಲ್, ಟಿ.ವಿ ಬಳಕೆ ಕಡಿಮೆ ಮಾಡಿ, ಪುಸ್ತಕ ಓದುವ ಹವ್ಯಾಸ ರೂಢಿಸಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಗ್ರಂಥಾಲಯದ ಮೇಲ್ವಿಚಾರಕ ಮಂಜುನಾಥ್ ಮಾತನಾಡಿ, ಓದುಗರ ಅಭಿರುಚಿಗೆ ತಕ್ಕಂತೆ ಸಾಧ್ಯವಾದಷ್ಟು ಉತ್ತಮ ಪುಸ್ತಕಗಳನ್ನು ಒದಗಿಸುತ್ತಿದ್ದೇವೆ. ಸಂಸ್ಕೃತಿ, ಇತಿಹಾಸ, ಸಾಹಿತ್ಯ, ವೇದ, ಉಪನಿಷತ್ತುಗಳ ಸಾರ ಅರಿಯಲು ಪುಸ್ತಕಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಗ್ರಂಥಾಲಯದಲ್ಲಿ ವಿವಿಧ ವಿಷಯಗಳ ಪುಸ್ತಕಗಳು ಲಭ್ಯವಿರುವುದರಿಂದ ತುಂಬಾ ಅನುಕೂಲವಾಗಿದೆ. ಪುಸ್ತಕ ಓದುವವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬರೂ ಮೊಬೈಲ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT