ಭಾನುವಾರ, ಏಪ್ರಿಲ್ 5, 2020
19 °C

ಅದ್ದೂರಿ ಚನ್ನಕೇಶವಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪುರಾಣ ಪ್ರಸಿದ್ಧ ಚನ್ನಕೇಶವಸ್ವಾಮಿ ದೇಗುಲದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಸೋಮವಾರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಇಲ್ಲಿನ ಕೋಟೆ ಬೀದಿಯಲ್ಲಿರುವ ದೇವಾಲಯದಲ್ಲಿ ದೇವರಿಗೆ ಧಾರ್ಮಿಕ ವಿಧಿ ವಿಧಾನಗಳಂತೆ ವಿಶೇಷ ಪೂಜೆ ನೆರವೇರಿಸಲಾಯಿತು.

ಗಾಂಧಿಚೌಕದಲ್ಲಿ ಬಣ್ಣ ಬಣ್ಣದ ಕಾಗದ ಹಾಗೂ ಹೂಗಳಿಂದ ಸಿಂಗರಿಸಿದ್ದ ರಥದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತಂದು ದೇವಾಲಯವನ್ನು ಮೂರು ಬಾರಿ ಪ್ರದಕ್ಷಿಣೆ ಮಾಡಿ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು.

ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ಮಹಾ ಮಂಗಳಾರತಿ, ಶ್ರೀಮತ್ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಭಾಗವತ ಸೇವೆ, ಮಂಟಪ ಪಡಿ ಸೇವೆ, ಯಾತ್ರಾದಾನೋತ್ಸವ, ಬ್ರಾಹ್ಮಣ ಸಂತರ್ಪಣೆ, ಪಾನಕಪೂಜೆ, ಕಲ್ಯಾಣ ಮಂಟಪಕ್ಕೆ ಹೂವಿನ ಅಲಂಕಾರ ಧೂಳೋತ್ಸವ ಮುಂತಾದ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿಸಲಾಯಿತು. 

ಹುಣ್ಣಿಮೆ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ಏರ್ಪಡಿಸಲಾಗಿತ್ತು. ಸುತ್ತಲಿನ ಹಳ್ಳಿಗಳಿಂದ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದರು. ಪಟ್ಟಣದಲ್ಲಿ  ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಅಂಗಡಿ ಮುಂಗಟ್ಟುಗಳಲ್ಲಿ ಜನರು ತಿಂಡಿ– ತಿನಿಸು ಖರೀದಿ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತು.

ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತ ಭಾವದಿಂದ ಹರಿಕೆ ತೀರಿಸಿದರು. ರಥೋತ್ಸವದ ಅಂಗವಾಗಿ ದೇವಾಲಯದ ಅನ್ನದಾನ ಸಮಿತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಯುವಕರು ಕೈಗಳ ಮೇಲೆ ಹಚ್ಚೆ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿತು. ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು