ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತನ್ನಿ’

ಸರ್ಕಾರಿ ಶಾಲೆಯ ನೂತನ ಕಟ್ಟಡ, ಅಂಗನವಾಡಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
Last Updated 23 ಫೆಬ್ರುವರಿ 2020, 13:17 IST
ಅಕ್ಷರ ಗಾತ್ರ

ಆನೇಕಲ್: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ತಮ್ಮ ಮನೋಭಾವನೆಯನ್ನು ಬದಲಾಯಿಸಿಕೊಂಡು ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಯನ್ನು ತರಲು ಸರ್ಕಾರ ಶ್ರಮಿಸಬೇಕಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು.

ಅವರು ತಾಲ್ಲೂಕಿನ ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡ, ಅಂಗನವಾಡಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಸಮಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆದರು. ಈ ಮೂಲಕ ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಲ್ಲಿ ಖಾಸಗಿ ಶಾಲೆಗಳ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಕಾರ್ಯಕ್ರಮ ರೂಪಿಸಿದರು ಎಂದು ಅವರು ಮೆಚ್ಚುಗೆ ಸೂಚಿಸಿದರು.

ಪ್ರಸ್ತುತ ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್‌.ಸುರೇಶ್‌ ಕುಮಾರ್‌ ಅವರು ಶಿಕ್ಷಣದ ಬಗ್ಗೆ ಆಸಕ್ತಿ ಹೊಂದಿದ್ದು ಈ ಯೋಜನೆಯನ್ನು ಮುಂದುವರೆಸುವುದರ ಜೊತೆಗೆ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ದಿಸೆಯಲ್ಲಿ ಚಿಂತನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿಗಳನ್ನು ಕೇಂದ್ರವಾಗಿಟ್ಟುಕೊಂಡು ಖಾಸಗಿ ಶಾಲೆಗಳಿಗೂ ಮಿಗಿಲಾಗಿ ಸೌಲಭ್ಯಗಳನ್ನು ನೀಡಿ ಮತ್ತು ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಆಶಿಸಿದರು.

ಅಲ್ಲಿರುವ ಶಿಕ್ಷಕರು ಮತ್ತು ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿಯ ಕೇಂದ್ರ ಶಾಲೆಯಲ್ಲಿ ಬಳಸಿಕೊಳ್ಳುವ ಮೂಲಕ ಗ್ರಾಮ ಪಂಚಾಯಿತಿಗಳು ದಿಟ್ಟ ಹೆಜ್ಜೆಯನ್ನಿಟ್ಟು ಗ್ರಾಮೀಣ ಭಾಗದ ಬಡವರಿಗೆ ಖಾಸಗಿ ಶಾಲೆಗಳಿಗೂ ಮಿಗಿಲಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಸಿಎಸ್‌ಆರ್‌ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು ಮೂಲಸೌಲಭ್ಯ ಮತ್ತು ಇಂಗ್ಲಿಷ್‌ ಶಿಕ್ಷಣ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಸರ್ಕಾರಿ ಶಾಲೆಗಳನ್ನು ಕಟ್ಟಬೇಕಾಗಿದೆ. ಇದಕ್ಕೆ ಶಿಕ್ಷಕರು ಮತ್ತು ಪೋಷಕರು ಸಂಕಲ್ಪ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನ ಮಾಡಲಾಗಿದೆ. ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಬಡವರಿಗೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರು. ಇದಕ್ಕಾಗಿ ಪ್ರಸ್ತುತ 1200ಕೋಟಿ ಅನುದಾನವನ್ನು ರಾಜ್ಯ ಸರ್ಕಾರಿ ಖಾಸಗಿ ಶಾಲೆಗಳಿಗೆ ನೀಡುತ್ತಿದೆ ಎಂದರು.

ಶಾಸಕ ಬಿ.ಶಿವಣ್ಣ ಮಾತನಾಡಿ ಗ್ರಾಮಗಳಲ್ಲಿ ಮೂಲಸೌಲಭ್ಯಗಳನ್ನು ನೀಡಲು ಜನಪ್ರತಿನಿಧಿಗಳು ಸಂಕಲ್ಪ ಮಾಡಬೇಕು. ಸರ್ಕಾರದ ವಿವಿಧ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಗ್ರಾಮಗಳ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಯಮರೆ ಗ್ರಾಮ ಪಂಚಾಯಿತಿಯ ಎಲ್ಲಾ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗಿದೆ. ಅಂಗನವಾಡಿ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡಗಳಿವೆ. ಸರ್ಕಾರಿ ಶಾಲೆಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಸಿಎಸ್‌ಆರ್‌ ನಿಧಿಯ ಸಮರ್ಪಕ ಬಳಕೆಗೆ ಶೀಘ್ರದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ ಮಾತನಾಡಿ, ಬಿಬಿಎಂಪಿ ಮಾದರಿಯಲ್ಲಿ ಜಿಲ್ಲಾ ಪಂಚಾಯಿತಿಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸರ್ಕಾರಿ ಯೋಜನೆಗಳ ಜಾರಿಗೆ ವೇಗ ನೀಡಲಾಗುವುದು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಪವಿತ್ರ ಜಯಪ್ರಕಾಶ್‌, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಕಲಾ.ಟಿ.ವಿ.ಬಾಬು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾ ವಿಜಯ್‌ಕುಮಾರ್, ಉಪಾಧ್ಯಕ್ಷ ಸಿ.ತಿಮ್ಮಯ್ಯ, ಆನೇಕಲ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಆರ್.ಕೆ.ರಮೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌.ರಾಮಮೂರ್ತಿ, ಮುಖಂಡರಾದ ಸುಶೀಲಮ್ಮ, ಜಯಶಂಕರ್‌, ಜಯಪ್ರಕಾಶ್‌, ಕೆಂಪಣ್ಣ, ನಾಗರಾಜು, ಶಂಕರ್‌, ಚಿನ್ನಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯರಾಮ್‌ ಹಾಜರಿದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತಲಾ ೫ಸಾವಿರದಂತೆ ೩೦೦ ವಿದ್ಯಾರ್ಥಿಗಳಿಗೆ ೧೫ ಲಕ್ಷ ರೂ. ಪ್ರೋತ್ಸಾಹಧನ ನೀಡಲಾಯಿತು. ಹೊಲಿಗೆ ತರಬೇತಿ ಪಡೆದವರಿಗೆ ಹೊಲಿಗೆ ಯಂತ್ರ, ವಿಧವಾ ವೇತನ ಮತ್ತು ವೃದ್ದಾಪ್ಯ ವೇತನದ ಆದೇಶಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT