ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ತಡೆಗಟ್ಟಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಕಟ್ಟುನಿಟ್ಟಿನ ಸೂಚನೆ
Last Updated 28 ನವೆಂಬರ್ 2020, 4:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಹಲವು ವರ್ಷಗಳಿಂದ ಪಿಡುಗಾಗಿ ಕಾಡುತ್ತಿರುವ ಹಾಗೂ ಸಮಾಜದಲ್ಲಿ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲ್ಯವಿವಾಹ ಇಂದಿಗೂ ನಡೆಯುತ್ತಿರುವುದು ವಿಷಾದನೀಯ ಸಂಗತಿ. ಮುಂದಿನ ದಿನಗಳಲ್ಲಿ ಯಾವುದೇ ಪೋಷಕರು ಬಾಲ್ಯವಿವಾಹ ಮಾಡಲು ಮುಂದಾದಲ್ಲಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಬಾಲ್ಯವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ, ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ ತಡೆಗಟ್ಟಲು ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯವಿವಾಹ ತಡೆಗಟ್ಟಲು ಅಧಿಕಾರಿಗಳು ಮತ್ತಷ್ಟು ಎಚ್ಚೆತ್ತುಕೊಳ್ಳಬೇಕು. ಪ್ರತಿಯೊಂದು ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಸದಂತೆ ಅರಿವು ಮೂಡಿಸಿ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ವೈದ್ಯಕೀಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಶ್ರಮಿಸಬೇಕೆಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಹಾಗಾಗಿ ಸಾರ್ವಜನಿಕರಲ್ಲಿ ಬಾಲ್ಯ ವಿವಾಹ ತಡೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಮಾತನಾಡಿ, 2020-21ನೇ ಸಾಲಿನಲ್ಲಿ ಬಾಲ್ಯ ವಿವಾಹ ಸಂಬಂಧ 98 ದೂರುಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 92 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. ಆರು ಬಾಲ್ಯವಿವಾಹ ನಡೆದಿದ್ದು, ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ದೇವರಾಜು ಅವರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT