ಮಂಗಳವಾರ, ಮೇ 24, 2022
31 °C
ರಸ್ತೆ ಸುರಕ್ಷತೆ ಸಂಬಂಧಿಸಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಸರಕು ವಾಹನಗಳಲ್ಲಿ ಪ್ರಯಾಣಿಕರಿದ್ದರೆ ಕ್ರಮ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಸರಕು ಸಾಗಣೆ ವಾಹನಗಳಲ್ಲಿ  ಕೂಲಿ ಕಾರ್ಮಿಕರನ್ನು ಹಾಗೂ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಪ್ರಾಣಿಗಳಂತೆ ಕರೆದೊಯ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕುಗಳನ್ನು ಹೊತ್ತೊಯ್ಯುವ ಲಗೇಜು ಆಟೋ, ಟ್ರ್ಯಾಕ್ಟರ್, ಟೆಂಪೋಗಳಲ್ಲಿ ಕೂಲಿ ಕಾರ್ಮಿಕರನ್ನು, ಗಾರ್ಮೆಂಟ್ಸ್ ಕಾರ್ಖಾನೆಗಳ ಉದ್ಯೋಗಿಗಳನ್ನು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಸಾಗಾಟ ಮಾಡುತ್ತಿದ್ದು ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಅಂಥ ಸರಕು ವಾಹನಗಳನ್ನು ವಶಕ್ಕೆ ಪಡೆದು ಸಾರಿಗೆ ಕಾಯ್ದೆ ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೋಲೀಸ್ ಇಲಾಖೆಗೆ ಸೂಚಿಸಿದರು.

ಸರಕು ಸಾಗಿಸುವ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕುರಿಗಳ ರೀತಿ ತುಂಬಿಕೊಂಡು ಸಾಗುವುದನ್ನು ನಿಯಂತ್ರಿಸಲು ಜಿಲ್ಲೆಯಲ್ಲಿರುವ 252 ಖಾಸಗಿ ಶಾಲೆಗಳ ಆಡಳಿತ ಮಂಡಳಿಗೆಗಳು ಹಾಗೂ 54 ಪದವಿಪೂರ್ವ ಕಾಲೇಜುಗಳಿಗೆ ಮಕ್ಕಳ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳಲು ಪತ್ರ ಬರೆಯುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಜಿಲ್ಲಾಡಳಿತ, ಪೋಲಿಸ್ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳ ಸುರಕ್ಷತಾ ಇಲಾಖೆ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಇದರ ಅಂಗವಾಗಿ ಜಿಲ್ಲೆಯ ಕೈಗಾರಿಕಾ ಮಾಲೀಕರು, ಕಾರ್ಮಿಕರಿಗೆ, ಗಾರ್ಮೆಂಟ್ಸ್ ಉದ್ಯೋಗಿಗಳಿಗೆ, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಾಲ್ಕು ತಾಲ್ಲೂಕುಗಳಲ್ಲೂ ಸಭೆ, ಜಾಥ, ಕರಪತ್ರಗಳ ಹಂಚುವಿಕೆ ಮೂಲಕ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಲ್ಲಲ್ಲಿ ಸಭೆ

ಮೇ 13ರಂದು ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ, ಮೇ 20ರಂದು ನೆಲಮಂಗಲದ ದಾಬಸ್‌ಪೇಟೆಯಲ್ಲಿ, ಮೇ27 ರಂದು ಹೊಸಕೋಟೆ ಕೈಗಾರಿಕಾ ಪ್ರದೇಶದಲ್ಲಿ ಜಾಥಾ ಇರಲಿದೆ ಕೈಗಾರಿಕಾ ಮಾಲೀಕರು ಹಾಗೂ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಸಭೆ, ಅರಿವು ಕಾರ್ಯಕ್ರಮ ಮತ್ತು ಜೂನ್ 3 ರಂದು ದೇವನಹಳ್ಳಿಯಲ್ಲಿ ಕೈಗಾರಿಕಾ ಮಾಲೀಕರುಗಳು ಹಾಗೂ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಸಭೆ, ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

 ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಜಗದೀಶ್, ಕಾರ್ಮಿಕಾಧಿಕಾರಿ ನಿರಂಜನ್, ಕಾರ್ಮಿಕ ನಿರೀಕ್ಷಕ ರವಿಕುಮಾರ್ ಮತ್ತು ಸಾರಿಗೆ, ಶಿಕ್ಷಣ, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.