ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ರಾಜಕೀಯಕ್ಕೆ ಕಾಂಗ್ರೆಸ್‌ ಕಿಡಿ

ಶಿವಕುಮಾರ್‌ ಬಂಧನ, ದೇವನಹಳ್ಳಿಯಲ್ಲಿ ಪ್ರತಿಭಟನೆ
Last Updated 4 ಸೆಪ್ಟೆಂಬರ್ 2019, 13:03 IST
ಅಕ್ಷರ ಗಾತ್ರ

ದೇವನಹಳ್ಳಿ: ನವದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್‌ ಅವರನ್ನು ಆದಾಯ ತೆರಿಗೆ ಅಧಿಕಾರಿಗಳು ಬಂಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಮುನಿನರಸಿಂಹಯ್ಯ ಮಾತನಾಡಿ, ‘ಮೂವತ್ತು ವರ್ಷದ ತಮ್ಮ ರಾಜಕೀಯ ಜೀವನದಲ್ಲಿ ಶಿವಕುಮಾರ್ ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ಹಗೆತನಕ್ಕಾಗಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ’ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮತ್ತು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆ.ಆರ್. ನಾಗೇಶ್ ಮಾತನಾಡಿ, ‘ಅನರ್ಹಗೊಂಡಿರುವ ಶಾಸಕರ 17 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಾರದು. ಶಿವಕುಮಾರ್ ರಾಜಕೀಯ ತಂತ್ರಗಾರಿಕೆಯಲ್ಲಿ ನಿಪುಣರು. ಅವರ ಆತ್ಮಸ್ಥೈರ್ಯ ಕುಗ್ಗಿಸಬೇಕು ಎನ್ನುವ ಏಕೈಕ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿ ಬಂಧಿಸಿ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತಿದೆ’ ಎಂದು ಕಿಡಿಕಾರಿದರು.

ತೂಬುಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ‘ಎರಡೂವರೆ ವರ್ಷಗಳಿಂದ ಕೇಂದ್ರದ ಬಿಜೆಪಿ ನಾಯಕರು ರಾಜ್ಯದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳನ್ನು ಕಳುಹಿಸಿ ವ್ಯವಸ್ಥಿತ ದಾಳಿ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಸದಸ್ಯ ಚಿನ್ನಪ್ಪ ಮಾತನಾಡಿ, ‘ರಾಜಕೀಯ ಎಂಬುದು ನಿಂತ ನೀರಲ್ಲ. ಸದಾ ಹರಿಯುವ ನೀರಿದ್ದಂತೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಕುತಂತ್ರ ರಾಜಕಾರಣಕ್ಕೆ ಶಿವಕುಮಾರ್‌ ಅವರನ್ನು ಬಲಿ ಪಶು ಮಾಡಲಾಗಿದೆ. ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ಅವರೊಬ್ಬ ನಿರಪರಾಧಿ ಎಂಬುದು ಶೀಘ್ರದಲ್ಲೇ ದೇಶಕ್ಕೆ ಗೊತ್ತಾಗಲಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಧಮ್ಮ ಮುನಿರಾಜು, ಕೆ.ಸಿ. ಮಂಜುನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚೈತ್ರ, ಎಪಿಎಂಸಿ ಉಪಾಧ್ಯಕ್ಷ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಪಿ. ಮುನಿರಾಜು, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಾರುತಿ, ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಕಯ್ಯಮ್ಮ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ. ಮಂಜುನಾಥ್, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಕಾರ್ಯದರ್ಶಿ ಆರ್. ರವಿಕುಮಾರ್, ಸದಸ್ಯರಾದ ಚೇತನ್‌ಗೌಡ, ಭೂವನಹಳ್ಳಿ ಮುನಿರಾಜು, ಕೆ.ಪಟಾಲಪ್ಪ, ಮುಖಂಡರಾದ ಕೆ.ವಿ.ಸ್ವಾಮಿ, ಅವತಿ ವೆಂಕಟೇಶ್, ಎನ್.ಮಧು, ಶ್ರೀನಿವಾಸ್, ಲಕ್ಷಣ್‌ಗೌಡ, ರಬ್ಬನಹಳ್ಳಿ ಮುನಿರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT