ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಂತ್ರಣಕ್ಕೆ ತಂಡವಾಗಿ ಕಾರ್ಯನಿರ್ವಹಿಸಿ: ಸಚಿವ ಅಶೋಕ

Last Updated 7 ಏಪ್ರಿಲ್ 2021, 5:03 IST
ಅಕ್ಷರ ಗಾತ್ರ

ದೇವನಹಳ್ಳಿ: ಕೋವಿಡ್-19 ಎರಡನೇ ಅಲೆ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಗ್ರಾಮ ಪಂಚಾಯಿತಿ ಹಂತ
ದಲ್ಲಿಯೂ ಅಧಿಕಾರಿಗಳ ತಂಡಗಳನ್ನು ರಚಿಸಿ, ಕೋವಿಡ್ ನಿಯಂತ್ರಣಕ್ಕೆ ಒಗ್ಗಟ್ಟಿ
ನಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್-19 ಮಾರ್ಗ
ಸೂಚಿಗಳ ಅನ್ವಯ ಮದುವೆ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನಿಯಂತ್ರಿಸಬೇಕು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದರು.

ಕೋವಿಡ್ ಮಾರ್ಗಸೂಚಿ ‌ಪಾಲಿಸದ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ಆರು ತಿಂಗಳ ಕಾಲ ಕಲ್ಯಾಣ ಮಂಟಪ ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಗ್ರಾಮಾಂತರ ಜಿಲ್ಲೆಯಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದು ಕಡ್ಡಾಯ ಎಂದರು.

ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಬಗ್ಗೆ ಹಾಗೂ ಲಸಿಕೆ ಪಡೆದುಕೊಳ್ಳುವ ಬಗ್ಗೆ ಮಾಹಿತಿಯುಳ್ಳ ಕರಪತ್ರ ಪ್ರಕಟಿಸಿ, ಜಿಲ್ಲೆಯ ಪ್ರತಿ ಮನೆ ಮನೆಗೂ ಶೀಘ್ರವಾಗಿ ತಲುಪಿಸುವ ಕೆಲಸ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದರು. ‌

ಕೋವಿಡ್ ಜತೆಗೆ ಜೀವನ ನಡೆಸಬೇಕಾಗಿರುವುದು ಅನಿವಾರ್ಯ ಇರುವುದರಿಂದ ರಾಜ್ಯದ ಆದಾಯದ ಬಹುಪಾಲು ಕೋವಿಡ್ ನಿಯಂತ್ರಣಕ್ಕೆ ಬಳಸಬೇಕಾಗಿದೆ. ಜಿಲ್ಲೆಯಲ್ಲಿ ಯಾವುದೇ ಜಾತ್ರೆಗಳಿಗೆ ಅನುಮತಿ ನೀಡ
ಬಾರದು ಹಾಗೂ ಸಂತೆಗಳಲ್ಲಿ ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೆ 10 ಅಡಿ ಅಂತರ ಇರಬೇಕು ಎಂದು ಸಲಹೆ ನೀಡಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆ ಮೀಸಲಿರಿಸುವಂತೆ ನೋಡಿಕೊಳ್ಳಬೇಕು. 1ರಿಂದ 9ನೇ ತರಗತಿ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ವಸತಿ ನಿಲಯ ಕೋವಿಡ್ ಕೇಂದ್ರಗಳಾಗಿ ಪರಿವರ್ತಿಸಲು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ 71023 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಜನರು ಲಸಿಕೆ ಪಡೆಯುವಂತೆ ಉತ್ತೇಜಿಸುವ ಕೆಲಸವಾಗಬೇಕು. ಬೇಸಿಗೆ ಆರಂಭವಾಗಿದ್ದು, ಮೂರು ತಿಂಗಳ ಅವಧಿಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಗಮನ ಹರಿಸಬೇಕು. ಅಗತ್ಯ ಇರುವ ಕಡೆ ಖಾಸಗಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು. ಇದಕ್ಕಾಗಿ ಶೀಘ್ರವೇ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಪೌರಾಡಳಿತ ಎಂಟಿಬಿ ನಾಗರಾಜು ಮಾತನಾಡಿ, ಅತಿವೃಷ್ಟಿ ಹಾಗೂ ಕೋವಿಡ್ ನಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಕಾರಣ ಕುಡಿಯುವ ನೀರಿಗೆ ಜಿಲ್ಲೆಗಳು ಕೇಳಿದಷ್ಟು ಅನುದಾನ ನೀಡಲಾಗುತ್ತಿಲ್ಲ. ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಅಸಮರ್ಪಕವಾಗಿ ಪೂರೈಸಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಹೊಸದಾಗಿ ಕೊಳವೆಬಾವಿ ಕೊರೆಯಲು ಹಣ ಬಿಡುಗಡೆ ಮಾಡುವಂತೆ ಕೋರಿದರು.

‌‌ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಹೊಸಕೋಟೆ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನಗರಸಭೆ ವತಿಯಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಮಾತನಾಡಿ, ಕೋವಿಡ್ ನಿಯಂತ್ರಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ
ಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷೆ ರೂಪ ಮರಿಯಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚೆನ್ನಣ್ಣನವರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT