ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ವಸತಿ ಶಾಲೆ, ನರ್ಸಿಂಗ್‌ ಕಾಲೇಜುಗಳಲ್ಲಿ ಕೋವಿಡ್‌–19 ಪರೀಕ್ಷೆ ಚುರುಕು

ಸೋಂಕು ಹರಡದಂತೆ ಜಿಲ್ಲಾಡಳಿತ ಸುರಕ್ಷತಾ ಕ್ರಮ
Last Updated 27 ನವೆಂಬರ್ 2021, 16:09 IST
ಅಕ್ಷರ ಗಾತ್ರ

ಆನೇಕಲ್:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲೂ ಕೋವಿಡ್‌–19 ಪರೀಕ್ಷೆ ಚುರುಕುಗೊಳಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದ್ದಾರೆ.

ತಾಲ್ಲೂಕಿನ ಎರಡು ವಸತಿ ಶಾಲೆ, ಕಾಲೇಜುಗಳಲ್ಲಿ 46 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ತಾಲ್ಲೂಕಿನ ಮರಸೂರು ಸ್ಫೂರ್ತಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಕಾಲೇಜಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಸ್ಫೂರ್ತಿ ಕಾಲೇಜಿನಲ್ಲಿ 12 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದ್ದು, ಎಲ್ಲರೂ ಎರಡು ಡೋಸ್‌ ಲಸಿಕೆ ಪಡೆದಿದ್ದಾರೆ. ಈ ಪೈಕಿ 9 ಮಂದಿ ಕೇರಳದವರಾಗಿದ್ದಾರೆ. ಕಾಲೇಜಿನ ಉಳಿದ 565 ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ನರ್ಸಿಂಗ್‌ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು ಜಿಗಣಿ ಕೋವಿಡ್‌ ಕೇರ್‌ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಳಿದ ಮೂವರನ್ನು ಐಸೋಲೇಷನ್‌ಗೆ ಒಳಪಡಿಸಲಾಗಿದೆ ಎಂದು ವಿವರಿಸಿದರು.

ನರ್ಸಿಂಗ್‌ ವಿದ್ಯಾರ್ಥಿಗಳಿಗೆ ರಜೆ
ನರ್ಸಿಂಗ್‌ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ತಪಾಸಣಾ ವರದಿ ಬರುವವರೆಗೂ ಪ್ರತ್ಯೇಕ ವಾಸದಲ್ಲಿರುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗಾ ವಹಿಸುತ್ತಿದ್ದಾರೆ.

ದೊಮ್ಮಸಂದ್ರ ಸಮೀಪದ ದಿ ಇಂಟರ್‌ ನ್ಯಾಷನಲ್‌ ಬೆಂಗಳೂರು ವಸತಿ ಶಾಲೆಯಲ್ಲಿ 33 ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಿದೆ. ಎಲ್ಲಾ ವಿದ್ಯಾರ್ಥಿಗಳು 17 ವರ್ಷದ ಒಳಗಿನವರಾಗಿದ್ದು ಯಾರೂ ಲಸಿಕೆ ಪಡೆದಿಲ್ಲ. ಒಬ್ಬ ವಿದ್ಯಾರ್ಥಿ ಮಹದೇವಪುರದಿಂದ ಶಾಲೆಗೆ ಬರುತ್ತಿದ್ದ ಈ ವಿದ್ಯಾರ್ಥಿಗೆ ಸೋಂಕು ಬಂದ ನಂತರ ಉಳಿದ ವಿದ್ಯಾರ್ಥಿಗಳಿಗೂ ಸೋಂಕು ಹರಡಿರುವ ಸಾಧ್ಯತೆಯಿದೆ. ಶಾಲೆಯ 497 ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆ ಪೂರ್ಣಗೊಂಡಿದ್ದು ಎಲ್ಲರ ವರದಿ ನೆಗಟಿವ್‌ ಬಂದಿದೆ ಎಂದು ವಿವರಿಸಿದರು.

ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಸ್ಫೂರ್ತಿ ಕಾಲೇಜು ಮತ್ತು ದೊಮ್ಮಸಂದ್ರದ ದಿ ಇಂಟರ್‌ ನ್ಯಾಷನಲ್‌ ಬೆಂಗಳೂರು ವಸತಿ ಶಾಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಎರಡು ತಂಡಗಳನ್ನು ನಿಯೋಜಿಸಲಾಗಿದೆ. ಸ್ಯಾನಿಟೈಜೇಷನ್‌, ಮಾಸ್ಕ್‌ ಮತ್ತು ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್‌, ತಹಶೀಲ್ದಾರ್‌ ಪಿ. ದಿನೇಶ್, ಡಿವೈಎಸ್ಪಿ ಎಂ. ಮಲ್ಲೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT