ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯಗಳಲ್ಲಿ ಕೋವಿಡ್ ಕೇಂದ್ರ

ಆನೇಕಲ್‌ ತಾಲ್ಲೂಕಿಗೆ ಪ್ರತ್ಯೇಕ ವಾರ್‌ರೂಂ: ಸಂಸದ ಡಿ.ಕೆ ಸುರೇಶ್‌ ಸೂಚನೆ
Last Updated 13 ಮೇ 2021, 9:12 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿ ನಿಲಯಗಳನ್ನು ಕೋವಿಡ್‌ ಕೇರ್‌ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಕೊರೊನಾ ಸೋಂಕಿತರಿಗೆ ತಾತ್ಕಾಲಿಕ ಉಪಚಾರ ಮಾಡುವ ಕೇಂದ್ರವಾಗಿ ರೂಪಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ನೋಡಲ್‌ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಆಸ್ಪತ್ರೆಗಳಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲು ಸಾಧ್ಯವಿಲ್ಲ. ಹೋಂ ಐಸೋಲೇಷನ್‌ ಮಾಡಬೇಕಾಗುತ್ತದೆ. ಕುಟುಂಬಗಳಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿದ್ದವರು ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ದಾಖಲಾದರೆ ಸೋಂಕು ಹರಡುವುದನ್ನು ತಡೆಯಲು ಸಾಧ್ಯ. ಸೋಂಕಿತರಿಗೆ ಪ್ರಾಥಮಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯ ದೊರೆಯಬೇಕು. ಹಾಗಾಗಿ ತಾಲ್ಲೂಕಿನ ಸರ್ಜಾಪುರ, ಜಿಗಣಿ, ಅತ್ತಿಬೆಲೆ, ಇಂಡ್ಲವಾಡಿ, ದೊಮ್ಮಸಂದ್ರ, ಹೆಬ್ಬಗೋಡಿ, ಬೊಮ್ಮಸಂದ್ರ, ಆನೇಕಲ್‌ ಸೇರಿದಂತೆ ವಿವಿಧೆಡೆ ಬಾಲಕಿಯರ ಮತ್ತು ಬಾಲಕರ ವಿದ್ಯಾರ್ಥಿ ನಿಲಯಗಳಿವೆ. ಈ ವಿದ್ಯಾರ್ಥಿ ನಿಲಯಗಳಲ್ಲಿ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿ ಕೋವಿಡ್‌ ಕೇರ್‌ ಕೇಂದ್ರಗಳನ್ನು ಪ್ರಾರಂಭಿಸಬೇಕು. ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಈ ಕೇಂದ್ರದ ಉಸ್ತುವಾರಿ ವಹಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಲಸೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಜನಸಾಂದ್ರತೆ ಹೆಚ್ಚಿರುತ್ತದೆ. ವಲಸೆ ಹೋಗುವ ಮತ್ತು ಬರುವವರಿಂದಾಗಿ ಸೋಂಕು ಹರಡುತ್ತದೆ. ಹಾಗಾಗಿ ಈ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಕೈಗಾರಿಕೆಗಳು, ದಾನಿಗಳ ನೆರವು ಪಡೆಯಬೇಕು ಎಂದರು.

ಸಾವುಗಳ ಬಗ್ಗೆ ನಿಖರ ಮಾಹಿತಿ ನೀಡಬೇಕು. ಡೆತ್‌ ಆಡಿಟಿಂಗ್‌ ಮಾಡಬೇಕು. ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆಯಿಲ್ಲದಂತೆ ಅಧಿಕಾರಿಗಳು ಕ್ರಮ ವಹಿಸುವ ಮೂಲಕ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ತಡೆಯಲು ಸಮರ್ಥ ಪಡೆಯನ್ನು ರಚಿಸಬೇಕು ಎಂದರು.

ಆನೇಕಲ್‌ ತಾಲ್ಲೂಕಿನಲ್ಲಿ ನಾಲ್ಕು ಹೋಬಳಿಗಳಿವೆ. ಸುಮಾರು 6 ಲಕ್ಷ ಮತದಾರರಿದ್ದಾರೆ. ಹಾಗಾಗಿ ಆನೇಕಲ್‌ ತಾಲ್ಲೂಕಿಗೆ ಪ್ರತ್ಯೇಕ ವಾರ್‌ರೂಂ ಮಾಡಬೇಕು. ಇದರಿಂದ ಈ ತಾಲ್ಲೂಕಿನ ಸೋಂಕಿತರಿಗೆ ತಾಲ್ಲೂಕಿನ ಆಸ್ಪತ್ರೆಗಳಲ್ಲಿಯೇ ಬೆಡ್‌ ಸೌಲಭ್ಯ ದೊರೆಯುವಂತಾಗುತ್ತದೆ. ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್‌ ಪಿ.ದಿನೇಶ್‌, ಪುರಸಭಾ ಅಧ್ಯಕ್ಷ ಎನ್.ಎಸ್.ಪದ್ಮನಾಭ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಸಿಇಒ ಸಂಗಪ್ಪ, ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀನಾರಾಯಣಸ್ವಾಮಿ, ಜಿಲ್ಲಾ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌, ತಾಲ್ಲೂಕು ವೈದ್ಯಾಧಿಕಾರಿ ಡಾ.ನಿರ್ಮಲ ದೇವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT