ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: 9,419 ಮಂದಿಗೆ ಬೂಸ್ಟರ್‌ ಲಸಿಕೆ ಗುರಿ

15ರಿಂದ 18 ವರ್ಷದ ಶೇ 50ರಷ್ಟು ಮಕ್ಕಳಿಗೆ ವ್ಯಾಕ್ಸಿನ್‌ ಪೂರ್ಣ
Last Updated 11 ಜನವರಿ 2022, 6:59 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಬೂಸ್ಟರ್‌ ಡೋಸ್‌ ಲಸಿಕೆ ಪಡೆದು ಸುರಕ್ಷಿತವಾಗಿರಬೇಕು. ಇದರಿಂದ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ’ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜ್‌ ತಿಳಿಸಿದರು.

ಪಟ್ಟಣದ ಲಯನ್ಸ್‌ ಕ್ಲಬ್‌ ಆವರಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಕೋವಿಡ್‌ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಬೂಸ್ಟರ್‌ ಡೋಸ್‌ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಜನತೆಯಿಂದ ಉಚಿತ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಜಿಲ್ಲೆಯಲ್ಲಿ 9,419 ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಭಾರತ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಟ ಮಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಶ್ಲಾಘನೀಯ. ಓಮೈಕ್ರಾನ್‌ ರೂಪಾಂತರ ತಳಿಯಿಂದ ಸುರಕ್ಷಿತವಾಗಿರಲು ಹಿರಿಯ ನಾಗರಿಕರು ಸ್ವಯಂ ಪ್ರೇರಿತರಾಗಿ ಬೂಸ್ಟರ್‌ ಡೋಸ್‌ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ದೇಶದಾದ್ಯಂತ ಲಸಿಕಾ ಅಭಿಯಾನವು ತ್ವರಿತಗತಿಯಲ್ಲಿ ನಡೆಯುತ್ತಿದೆ. ಈಗಾಗಲೇ, ಸುಮಾರು 150 ಕೋಟಿ ಡೋಸ್‌ ಲಸಿಕೆ ನೀಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಇದೊಂದು ಐತಿಹಾಸಿಕ ಸಾಧನೆ ಎಂದು ಅಭಿಪ್ರಾಯಪಟ್ಟರು.

ಈಗಾಗಲೇ ಎರಡು ಡೋಸ್‌ ಲಸಿಕೆ ಪಡೆದು, ಒಂಬತ್ತು ತಿಂಗಳು ಕಳೆದಿರುವ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಮತ್ತು ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ ನೀಡಲಾಗುವುದು. ಓಮೈಕ್ರಾನ್‌ ತಡೆಯಲು ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ವಾರಾಂತ್ಯ ಕರ್ಫ್ಯೂವಿಗೆ ಜನತೆ ಸಹಕರಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಶೇ 95.8ರಷ್ಟು ಮೊದಲ ಡೋಸ್‌ ಮತ್ತು ಶೇ 85.7ರಷ್ಟು ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. 15-18 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯವು ಚಾಲ್ತಿಯಲ್ಲಿದ್ದು, ಶೇ 50ರಷ್ಟು ಗುರಿ ಸಾಧನೆಯಾಗಿದೆ ಎಂದು ಮಾಹಿತಿನೀಡಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಕೋವಿಡ್‌ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಜನತೆ ಉದಾಸೀನ ತೋರದೆ, ಆರೋಗ್ಯಯುತ ಸಮಾಜದ ನಿರ್ಮಾಣಕ್ಕಾಗಿ ಸರ್ಕಾರವು ನೀಡುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ನೀಡಿದರು.

ಸೋಂಕು ಹರಡುವಿಕೆ ತಡೆಯಲು ವ್ಯಕ್ತಿಗತ ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸಿ ಶುಚಿತ್ವಕ್ಕೆ ಒತ್ತು ನೀಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ತಹಶೀಲ್ದಾರ್‌ ಅನಿಲ್‌ ಕುಮಾರ್‌, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್‌ ಉಪ‍ಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT