ಮಂಗಳವಾರ, ಸೆಪ್ಟೆಂಬರ್ 28, 2021
21 °C
ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ಘೋಷಣೆ

ಮೇ 3ರವರೆಗೆ ಕರ್ಫ್ಯೂ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಗ್ರಾಮಾಂತರ ಜಿಲ್ಲೆಯಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 9 ಗಂಟೆಯಿಂದಲೇ ಜಾರಿಗೆ ಬರುವಂತೆ ಕೊರೊನಾ ನೈಟ್‌ ಕರ್ಫ್ಯೂ ಜಾರಿಯಾಗಲಿದೆ ಎಂದು ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ಹೇಳಿದರು.

ಅವರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಕೊರೊನಾ ಸೋಂಕು ನಿಯಂತ್ರಣ ಜಾಗೃತಿ ಅಭಿಯಾನ ಅಂಗವಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೊರೊನಾ ಎರಡನೇ ಅಲೆಯು ಅತಿ ವೇಗವಾಗಿ ಹರಡುತ್ತಿದ್ದು ಸಾರ್ವಜನಿಕರು ನಿರ್ಲಕ್ಷ ತೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೇ 3ರವರೆಗೂ ಪ್ರತಿ ದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಕೊರೊನಾ ನೈಟ್‌ ಕರ್ಫ್ಯೂ ಜಾರಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ನಮ್ಮ ಕುಟುಂಬ ಮತ್ತು ನಮ್ಮ ಅಕ್ಕ ಪಕ್ಕದವರ ಆರೋಗ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಮೇಲಿದೆ. ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರ ವಿರುದ್ಧ ಪೊಲೀಸರು ವಿಧಿಸುವ ದಂಡಕ್ಕೆ ತುತ್ತಾಗಿ ಪೊಲೀಸರ ಬಳಿ ಅಸಭ್ಯವಾಗಿ ನಡೆದು ಕೊಂಡ ಘಟನೆಗಳು ಇವೆ. ಪೊಲೀಸರು ಸಾರ್ವಜನಿಕರ ಅನುಕೂಲಕ್ಕಾಗಿ ಕೆಲಸ ಮಾಡುವುದೇ ಹೊರತು ಜನರಿಗೆ ತೊಂದರೆ ನೀಡುವ ಉದ್ದೇಶದಿಂದ ಅಲ್ಲ ಎಂದರು.

ಸರ್ಕಾರದ ಆದೇಶದಂತೆ ಶುಭಸಮಾರಂಭಗಳು ಮತ್ತು ಇನ್ನಿತರ ಕಾರ್ಯಕ್ರಮಗಳಲ್ಲಿ ಎಷ್ಟು ಜನ ಭಾಗವಹಿಸಬೇಕು ಎನ್ನುವ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು.ಸರ್ಕಾದ ಮಾರ್ಗದರ್ಶಿ ಸೂಚಿನೆಗಳ ಪಾಲನೆ ಮಾಡುವ ಕಡೆಗೆ ಸಾರ್ವಜನಿಕರು
ಸಹ ಪ್ರಥಮ ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಮಾತನಾಡಿ, ಕೊರೊನಾ ಸೋಂಕು ತಡೆಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಸಂದರ್ಭದಲ್ಲಿ ಬೆಂಗಳೂರಿನ ಆರ್.ಕೆ.ಟ್ರಸ್ಟ್ ‘ಲೆಟ್ಸ್ ಮಾಸ್ಕ್ ಇಂಡಿಯಾ’ ಧ್ಯೇಯ ವಾಕ್ಯದೊಂದಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು. ಈ ಹಿಂದೆಯು ಸಹ 10 ಲಕ್ಷ ಮಾಸ್ಕ್‌ಗಳನ್ನು ವಿವಿಧ ಸಂಘ ಸಂಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ನೀಡಿ ಸಾಮಾಜಿಕ ಕಾಳಜಿ ತೋರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಡಿವೈಎಎಸ್‌ಪಿ ಟಿ.ರಂಗಪ್ಪ,ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ,ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಬಿ.ನವೀನ್‌ಕುಮಾರ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು