ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಮೊತ್ತ ಬಿಡುಗಡೆಗೆ ಒತ್ತಾಯ: ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ
Last Updated 17 ಜನವರಿ 2023, 7:00 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗುತ್ತಿಗೆದಾರರ ಬಾಕಿ ಮೊತ್ತ ಬಿಡುಗಡೆ, ಭ್ರಷ್ಟಾಚಾರ ನಿಯಂತ್ರಣ, ಜಿಎಸ್‌ಟಿ ಗೊಂದಲ ಮತ್ತು ಪ್ಯಾಕೇಜ್ ಪದ್ಧತಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುತ್ತಿಗೆದಾರರ ರಾಜ್ಯ ಸಂಘದಿಂದ ಜ.18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿವಿಲ್ ಗುತ್ತಿಗೆದಾರರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಲಕ್ಷ್ಮಿಪತಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆಂಪಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಲು ಕಾರಣರಾದ ಸಚಿವ ಮುನಿರತ್ನ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ಬೇಡಿಕೆ ಮತ್ತು ಸಮಸ್ಯೆಗಳಿಗೆ ಸರ್ಕಾರ ಸಂದಿಸುತ್ತಿಲ್ಲ ಎಂದರು.

ಪ್ರತಿ ಸರ್ಕಾರಕ್ಕೂ ಮನವಿ ಸಲ್ಲಿಸುತ್ತಾ ನಮ್ಮ ಬೇಡಿಕೆಗಳಿಗೆ ಹಂತ ಹಂತವಾಗಿಯಾದರೂ ಸ್ಪಂದಿಸುವಂತೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸುತ್ತಿವೆ. ಮುಖ್ಯಮಂತ್ರಿ, ಸಚಿವರು ಮತ್ತು ಅಧಿಕಾರಿಗಳಿಗೆ ನೂರಾರು ಪತ್ರ ಬರೆದರೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಹೋರಾಟದ ಹಾದಿಯನ್ನು ಹಿಡಿಯುವುದು ಅನಿವಾರ್ಯವಾಗಿದೆ ಎಂದರು.

ಹೋರಾಟಕ್ಕೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ. ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುತ್ತದೆ. ಹಲವಾರು ರಾಜ್ಯಗಳು ಭ್ರಷ್ಟಾಚಾರ ನಿಯಂತ್ರಣಕ್ಕೆ ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ನೀತಿ ನಿಯಮ ರೂಪಿಸಿ ಪರಿಹಾರಗಳನ್ನು ಬಜೆಟ್‌ನಲ್ಲಿಯೇ ಘೋಷಣೆ ಮಾಡಿವೆ. ರಾಜ್ಯ ಸರ್ಕಾರ ಗುತ್ತಿಗೆದಾರರ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಮುಂಬರುವ ಬಜೆಟ್‍ನಲ್ಲಿಯೇ ಘೋಷಿಸಬೇಕು ಎಂದರು.

ಗುತ್ತಿಗೆದಾರರ ಒತ್ತಾಯ:

ಗುತ್ತಿಗೆದಾರರಿಗೆ ವಿವಿಧ ಇಲಾಖೆಗಳಿಂದ ಸುಮಾರು ₹25 ಸಾವಿರ ಕೋಟಿ ಹಣ ಬಿಡುಗಡೆಯಾಗಬೇಕಿದೆ. ಎಲ್ಲಾ ಇಲಾಖೆಗಳ ಪೂರ್ಣಗೊಳಿಸಿದ, ಚಾಲ್ತಿಯಲ್ಲಿರುವ ಮತ್ತು ಮುಂಬರುವ ಕಾಮಗಾರಿಗಳ ಮೊತ್ತದ ಅಂದಾಜು ಪಟ್ಟಿಯನ್ನು ತಯಾರಿಸಿ ಬಜೆಟ್‍ನಲ್ಲಿ ಪ್ರತ್ಯೇಕ ಅನುದಾನವನ್ನು ನಿಗದಿಪಡಿಸಬೇಕು.

ಕಾಮಗಾರಿಗಳ ಒಟ್ಟು ಮೊತ್ತದ ಶೇ 30 ರಿಂದ 40 ರಷ್ಟು ಹಣ ವಿವಿಧ ರೂಪಗಳಲ್ಲಿ ಸೋರಿಕೆಯಾಗುತ್ತಿದೆ. ಬಹುತೇಕ ಹಣವನ್ನು ವಿವಿಧ ವೆಚ್ಚಗಳಿಗೆ ಹೊಂದಿಸಬೇಕಾದ ಅನಿವಾರ್ಯತೆ ಇದ್ದು, ಕಾಮಗಾರಿಗಳು ಕಳಪೆಯಾಗಿದ್ದರೆ ಸಾರ್ವಜನಿಕರಿಂದ ಹಿಡಿದು ವಿಧಾನಸೌಧದವರೆಗೆ ಎಲ್ಲರೂ ಗುತ್ತಿಗೆದಾರರನ್ನು ಬಲಿಪಶುಗಳನ್ನಾಗಿ ಮಾಡುತ್ತಾರೆ. ಭ್ರಷ್ಟಾಚಾರದ ಕಾರಣದಿಂದಾಗಿ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಹೆಣಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಮತ್ತು ತೆರಿಗೆದಾರರ ಹಣ ಪೋಲಾಗಬಾರದು ಎಂಬ ಕಾಳಜಿ ಇದ್ದರೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು.

ಪ್ಯಾಕೇಜ್ ಪದ್ಧತಿಯಿಂದ ಸ್ಥಳೀಯ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಇದನ್ನು ಕೈಬಿಡಬೇಕು.

ಕೇಂದ್ರ ಸರ್ಕಾರದ ಸೂಚನೆ ಅನ್ವಯ ಗುತ್ತಿಗೆ ಕಾಮಗಾರಿಗಳ ಮೇಲೆ ಜಿಎಸ್‌ಟಿ ದರವನ್ನು ಶೇ 18ಕ್ಕೆ ಹೆಚ್ಚಳ ಮಾಡಲಾಗಿದ್ದು, ಇದ್ದರಿಂದ ಹಳೆಯ ಕಾಮಗಾರಿಗಳಿಗೆ ಶೇ 12ರಷ್ಟು ಮಾತ್ರ ಜಿಎಸ್‌ಟಿ ಕಡಿತ ಮಾಡಿಕೊಳ್ಳಬೇಕು.

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಸ್ತುತ ಸಾಲಿನ ದರಪಟ್ಟಿ ತಯಾರಿಸುವ ಸಂದರ್ಭದಲ್ಲಿ ಪ್ರಸ್ತುತ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ, ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚಳವಾಗಿರುವ ಕಾರ್ಮಿಕರ ವೇತನವನ್ನು ಗಮನದಲ್ಲಿರಿಸಿಕೊಂಡು ದರಪಟ್ಟಿ ನಿಗದಿಪಡಿಸಬೇಕು ಎನ್ನುವ ಬೇಡಿಕೆಗಳನ್ನು ಮಂಡಿಸಲಾಗಿದೆ ಎಂದರು.

ತಾಲ್ಲೂಕು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಬಚ್ಚೇಗೌಡ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿಕಾಂತ್, ನಿರ್ದೆಶಕ ಲಕ್ಕಣ್ಣ, ಕೇಶವಮೂರ್ತಿ, ಬ್ರಹ್ಮದೇವ್, ರೆಹಮಾನ್ ಷರೀಫ್, ವಿನೋದ್‌ಕುಮಾರ್, ಮನು, ಚೇತನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT