ದೊಡ್ಡಬಳ್ಳಾಪುರ: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ರಸ್ತೆಗಳಿಗೆ ಚರಂಡಿ ನೀರು ನುಗ್ಗಿ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡಿದರು.
ನಗರದ ತಾಲ್ಲೂಕು ಕಚೇರಿ ಮುಂದಿನ ರಸ್ತೆ ಸೇರಿದಂತೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದಂತೆ ಪ್ಲಾಸ್ಟಿಕ್ ಕವರ್‌ಗಳಿಂದ ಚರಂಡಿ ಬಂದ್ ಆಗಿದ್ದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿಯಿತು. ಒಳಚರಂಡಿ ಮ್ಯಾನ್ ಹೋಲ್ ಕಾಣದೆ ಬೈಕ್ ಸವಾರರು ಬಿದ್ದು ಗಾಯಗೊಂಡರು.
ನಗರದ ರೈಲ್ವೆ ನಿಲ್ದಾಣ ವ್ಯಾಪ್ತಿಯ ಬಡಾವಣೆಗಳಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ಸೌಲಭ್ಯ ಇಲ್ಲದೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಸಾರ್ವಜನಿಕರು ಮನೆಗಳಿಗೆ ಹೋಗಲು ಪರದಾಡುವಂತಂಹ ಸ್ಥಿತಿ ನಿರ್ಮಾಣವಾಗಿತ್ತು.
ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತವಾಗಿರುವ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾರೂ ಸಹ ಈ ಕಡೆಗೆ ಬಂದು ನೋಡಿಯೇ ಇಲ್ಲ ಎಂದು ದೂರಿರುವ ಸ್ಥಳೀಯ ನಿವಾಸಿ ಮಂಜುನಾಥರೆಡ್ಡಿ, ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.