ಸೋಮವಾರ, ಸೆಪ್ಟೆಂಬರ್ 26, 2022
22 °C
ಜಿಲ್ಲಾ ಕೇಂದ್ರ ಘೋಷಣೆಗೆ ಆಗ್ರಹಿಸಿ ಜನಸ್ಪಂದನದಲ್ಲಿ ಪ್ರತಿಭಟನೆಗೆ ಯತ್ನ

ದೊಡ್ಡಬಳ್ಳಾಪುರ: ಹೋರಾಟಗಾರರ ವಶ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರವನ್ನು ಘೋಷಣೆ ಮಾಡುವಂತೆ ಆಗ್ರಹಿಸಿ ಬಿಜೆಪಿಯ ಜನಸ್ಪಂದನ ನಡೆಯುವ ಸ್ಥಳದಲ್ಲಿ ಪ್ರತಿಭಟನೆಗೆ ಮುಂದಾದ ಜಿಲ್ಲಾ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ಬೆಳಿಗ್ಗೆ 9 ಗಂಟೆಯಿಂದ ನಗರದ ಕನ್ನಡ ಜಾಗೃತ ಪರಿಷತ್ ಬಳಿ ಸಭೆ ಸೇರಿ ಕಪ್ಪು ಪಟ್ಟಿ, ಕಪ್ಪು ಬಟ್ಟೆ ಧರಿಸಿಕೊಂಡು ಜಾಥದ ಮೂಲಕ ತೆರಳಿ ಜನಸ್ಪಂದನ ನಡೆಯುವ ಸ್ಥಳದ ಕಡೆಗೆ ಹೋರಟಿದ್ದವರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಸ್ಥಳಕ್ಕೆ ಬಂದ ಡಿವೈಎಸ್‌ಪಿ ನಾಗರಾಜ್‌ ಹೋರಾಟಗಾರರನ್ನು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ಯದರು.

ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅವಕಾಶ ನೀಡುತ್ತಿಲ್ಲ. ಸಂಬಂಧಪಟ್ಟವರನ್ನು ಸ್ಥಳಕ್ಕೆ ಕರೆಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಬಸ್‍ನಲ್ಲಿ ಕರೆದೊಯ್ಯುತ್ತಿದ್ದಾಗ ಕಪ್ಪು ಪಟ್ಟಿ ತೆರವು ಮಾಡಿ, ಯಾವುದೇ ಘೋಷಣೆ ಕೂಗಬೇಡಿ ಎಂದು ಪೊಲೀಸರು ತಾಕೀತು ಮಾಡಿದರು. ಇದರಿಂದ ಸಿಟ್ಟಿಗೆದ್ದ ಹೋರಾಟಗಾರರು ಬಸ್‌ನಲ್ಲೇ ಪೊಲೀಸರೊಂದಿಗೆ ವಾಗ್ವದಕ್ಕೆ ಇಳಿದರು. ನಾವು ನಮ್ಮ ಸ್ವಾರ್ಥಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ. ಇದು ಊರಿನ ಜನರ ಹಿತಕ್ಕಾಗಿ ಮಾಡುತ್ತಿರುವ ಹೋರಾಟ. ನಮ್ಮನ್ನು ಕೈದಿಗಳಂತೆ ನಡೆಸಿಕೊಳ್ಳುತ್ತಿರುವ ಪೊಲೀಸರ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಶಕ್ಕೆ ಪಡೆದಿದ್ದ ಪ್ರತಿಭಟನಾಕಾರರನ್ನು ದೊಡ್ಡಬೆಳವಂಗಲದ ಖಾಸಗಿ ಕಲ್ಯಾಣ ಮಂದಿರದಲ್ಲಿ ಸಂಜೆಯವರೆಗೆ ಇರಿಸಿಕೊಂಡು ನಂತರ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡ ರಾಜಘಟ್ಟರವಿ, ಜಿ.ಸತ್ಯನಾರಾಯಣ್, ಸಂಜೀವ್‌ನಾಯಕ್, ಡಿ.ಪಿ.ಆಂಜನೇಯ, ‘ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಜಿಲ್ಲಾ ಕೇಂದ್ರದ ವಿಚಾರವಾಗಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಲೇ ಇದ್ದಾರೆ’ ಎಂದು ಕಿಡಿಕಾರಿದರು.

‘ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಜನಸ್ಪಂದನ ವೇಳೆ ಕರಾಳೋತ್ಸವ ಆಚರಿಸಲು ನಿರ್ಧರಿಸಲಾಗಿತ್ತು. ಸಚಿವ ಡಾ ಕೆ.ಸುಧಾಕರ್ ಅವರ ಹೇಳಿಕೆ ಖಂಡಿಸಿ ತಾಲ್ಲೂಕಿನಲ್ಲಿ ಹೋರಾಟ ನಡೆಸಲಾಗುತ್ತಿದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆಗಳಿದ್ದರು ದೊಡ್ಡಬಳ್ಳಾಪುರ ತಾಲ್ಲೂಕಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರದ ಅರ್ಹತೆಗಳ ಬಗ್ಗೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯ ಅರ್ಹತೆಗಳನ್ನು ಪಟ್ಟಿ ಮಾಡಿ ಹಾಗೂ ದೊಡ್ಡಬಳ್ಳಾಪುರದ ವಿಶೇಷತೆಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಿ ಸಾರ್ವಜನಿಕರಿಗೆ ಹಂಚಲಾಗಿದೆ. ಸಾರ್ವಜನಿಕರು ಸಹ ಹೋರಾಟ ಬೆಂಬಲಿಸಲು ಹಾಗೂ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲು ಹೋರಾಟ ಸಮಿತಿ ಕರಾಳೋತ್ಸವ ಹಮ್ಮಿಕೊಂಡಿದೆ’ ಎಂದು ಹೋರಾಟಗಾರರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು