ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಾತುರಿಯಲ್ಲಿ ಪರೀಕ್ಷೆ ಇಲ್ಲ: ಸುರೇಶ್‌ ಕುಮಾರ್

Last Updated 1 ಜನವರಿ 2021, 21:05 IST
ಅಕ್ಷರ ಗಾತ್ರ

ಆನೇಕಲ್: ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಎಲ್ಲ ಇಲಾಖೆಗಳು. ಪೋಷಕರು ಮತ್ತು ವಿದ್ಯಾರ್ಥಿಗಳು ಸಹಕಾರ ನೀಡಿ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದರು.

ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಆನೇಕಲ್‌ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿ ಮಾತನಾಡಿದರು.

ಕಳೆದ ಏಳೆಂಟು ತಿಂಗಳಿನಿಂದ ಶಾಲೆಗಳು ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಿದ್ದವು. ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಶೇ40-50ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದಾರೆ. ಎರಡು ಮೂರು ದಿನಗಳಲ್ಲಿ ಹಾಜರಾತಿ ಹೆಚ್ಚಳವಾಗುವ ವಿಶ್ವಾಸವಿದೆ. ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದ್ದರೂ ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಲೋಪವಾಗಿರುವ ಬಗ್ಗೆ ವರದಿಗಳಿವೆ. ಹಾಗಾಗಿ ಸಂಬಂಧಿಸಿದ ಡಿಡಿಪಿಐಗಳಿಗೆ ನೋಟಿಸ್‌ ನೀಡುವಂತೆ ಸೂಚಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಹಲವಾರು ಮೊಬೈಲ್‌ ಗೇಮ್‌ಗಳಲ್ಲಿ ಸಹ ತೊಡಗಿಸಿಕೊಂಡಿದ್ದರು. ಹಾಗಾಗಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಹೇರದೆ ಸಂತಸದಿಂದ ಕಲಿಯುವ ವಾತಾವರಣ ನಿರ್ಮಾಣ ಮಾಡಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಎಲ್ಲ ರೀತಿಯ ಚಟುವಟಿಕೆಗಳನ್ನು ರೂಪಿಸಬೇಕು ಎಂದರು.

ಪರೀಕ್ಷೆಗಳನ್ನು ತರಾತುರಿಯಲ್ಲಿ ಮಾಡಲಾಗುವುದಿಲ್ಲ. ಕಲಿಕೆಗೆ ಹೆಚ್ಚಿನ ಸಮಯ ನೀಡಿ ಪರೀಕ್ಷೆ ನಡೆಸಲಾಗುವುದು. ಪಠ್ಯ ವಸ್ತುವಿನಲ್ಲಿ ಕಡಿತ ಮಾಡಲಾಗುವುದು. ಪಿಯುಸಿಗೆ ಅವಶ್ಯಕವಿರುವ ಮೂಲವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಉಳಿದ ಸಮಯವನ್ನು ವಿದ್ಯಾರ್ಥಿಗಳು ವ್ಯರ್ಥ ಮಾಡದೇ ಸಂಪೂರ್ಣ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಲಿಕೆಗೆ ಯಾವುದೇ ಚ್ಯುತಿ ಬರುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ರಾಜ್ಯದಲ್ಲಿ ಸುಮಾರು 65 ಸಾವಿರ ಶಾಲಾ ಕೊಠಡಿಗಳಿವೆ. ಈ ಎಲ್ಲಾ ಕೊಠಡಿಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳ
ಲಾಗಿದೆ. ಸ್ಯಾನಿಟೈಸ್ ಮಾಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಬಳಕೆ ಮಾಡಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯ ತಪಾಸಣೆಗೆ ಕ್ರಮಕೈಗೊಂಡಿದ್ದಾರೆ ಎಂದು
ತಿಳಿಸಿದರು.

ಶಾಲೆಗಳಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವ ಸಂಕಲ್ಪವನ್ನು ಎಲ್ಲ ಶಿಕ್ಷಕರು ಮಾಡಿದ್ದಾರೆ. ಶಾಲೆಗಳು ಸುರಕ್ಷಿತ ಕೇಂದ್ರಗಳು ಎಂಬ ನಂಬಿಕೆಗೆ ಚ್ಯುತಿ ಬರದಂತೆ ಕೆಲಸ ಮಾಡುವ ವಿಶ್ವಾಸವಿದೆ ಎಂದರು.

ಡಿಡಿಪಿಐ ರಾಜೇಂದ್ರ, ತಹಶೀಲ್ದಾರ್‌ ಸಿ.ಮಹಾದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್‌.ರಾಮಮೂರ್ತಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌, ಆನೇಕಲ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ಚಂದಾಪುರ ಪುರಸಭಾ ಅಧ್ಯಕ್ಷ ಕೃಷ್ಣಾರೆಡ್ಡಿ, ಮುಖಂಡರಾದ ಕೆ.ವಿ.ಶಿವಪ್ಪ, ಟಿ.ವಿ.ಬಾಬು, ಎಸ್‌.ಆರ್‌.ಟಿ.ಅಶೋಕ್‌, ಜಯಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT