ಗುರುವಾರ , ಮೇ 6, 2021
25 °C

ಪ್ರಜಾಪ್ರಭುತ್ವದ ಭದ್ರತೆಗೆ ಒತ್ತು ನೀಡಿ: ಎಂ.ಆರ್. ರವಿಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಯುವ ಮತದಾರರೇ ಯುವ ನೇತಾರರು. ಯುವಕರಿಂದ‌ ದೇಶದ ಅಭಿವೃದ್ಧಿ ಸಾಧ್ಯ. ಹಾಗಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಹೇಳಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ‌ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸೇರಿದಂತೆ ಇತರೇ ಚುನಾವಣೆಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸುವ ಮೂಲಕ ನಾಡು ಕಟ್ಟುವ ಕೆಲಸ ಮಾಡಬೇಕು. ಪಂಚಾಯಿತಿ ಚುನಾವಣೆಯಿಂದ ಸಂಸತ್ ಚುನಾವಣೆವರೆಗೂ ಚುನಾವಣಾ ಪ್ರಕ್ರಿಯೆಯ ನೀತಿ ನಿಯಮಗಳ ಕುರಿತು ಸಂವಿಧಾನದಲ್ಲಿ ತಿಳಿಸಲಾಗಿದೆ ಎಂದರು.

ಜಗತ್ತಿನಾದ್ಯಂತ ಹಲವು ರಾಷ್ಟ್ರಗಳಲ್ಲಿ ಹಲವು ಬಗೆಯಲ್ಲಿ ಚುನಾವಣೆ ನಡೆಸಲಾಗುತ್ತದೆ. ಚುನಾವಣಾ ಫಲಿತಾಂಶ ನೀಡಲು 21 ರಿಂದ 45 ದಿನಗಳು ತೆಗೆದುಕೊಳ್ಳಲಾಗುತ್ತದೆ. ಆದರೆ ಭಾರತದಲ್ಲಿ ಹಲವು ಚುನಾವಣೆ ನಡೆದರೂ 3 ರಿಂದ 6 ಗಂಟೆಯೊಳಗೆ‌ ಫಲಿತಾಂಶ ನೀಡುವಂತಹ ವ್ಯವಸ್ಥೆಯು ಚುನಾವಣಾ ಆಯೋಗದಲ್ಲಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಜ.1ರಿಂದಲೇ ಮತದಾರರ ಪಟ್ಟಿ ಪರಿಷ್ಕರಣೆ, ಕರಡು ಪ್ರತಿ ಮುದ್ರಣ ಸೇರಿದಂತೆ 18 ವರ್ಷ ತುಂಬಿದ ಅರ್ಹ ಯುವಜನರನ್ನು ಮತದಾರರ ಪಟ್ಟಿಗೆ ಸೇರಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ. ನಾಯಕ್‍ ಮಾತನಾಡಿ, ಸಂವಿಧಾನದ ಆಶಯದಂತೆ ಸಮಾನತೆ, ಭ್ರಾತೃತ್ವ, ಮೂಲಭೂತ ಹಕ್ಕುಗಳು ಹಾಗೂ ಮೂಲಭೂತ ಕರ್ತವ್ಯಗಳ ಅನ್ವಯ 18 ವರ್ಷ ಪೂರೈಸಿದ ಭಾರತೀಯ ಪ್ರಜೆಗಳಿಗೆ ಮತದಾನದ ಹಕ್ಕನ್ನು ನೀಡಲಾಗಿದೆ. ಯುವಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ‌ಜನತೆಗೆ ಮತದಾನದ ಕುರಿತು ಅರಿವು ಮೂಡಿಸಬೇಕು ಎಂದರು.

ಪ್ರತಿಯೊಬ್ಬರಲ್ಲೂ ದೇಶಾಭಿಮಾನ, ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿ ಚುನಾವಣೆಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಮತ ಚಲಾವಣೆಯಾಗುತ್ತಿದೆ. ಇದು ಜಿಲ್ಲೆಯಲ್ಲಿ ಪ್ರಜ್ಞಾವಂತ ಮತದಾರರಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ನೀಡಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್, ಪುರಸಭಾ ಮುಖ್ಯಾಧಿಕಾರಿ ನಾಗರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸಪ್ಪ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು