ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣ ಹತ್ಯೆ ಮುಕ್ತ ಜಿಲ್ಲೆಗೆ ಪಣ: ಬೆಂಗಳೂರು ಗ್ರಾಮಾಂತರ ಡಿ.ಸಿ

Published 2 ಆಗಸ್ಟ್ 2024, 15:31 IST
Last Updated 2 ಆಗಸ್ಟ್ 2024, 15:31 IST
ಅಕ್ಷರ ಗಾತ್ರ

ದೇವನಹಳ್ಳಿ: ಭ್ರೂಣ ಹತ್ಯೆ ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ. ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಶಿವಶಂಕರ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಬಗ್ಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಾಗಾರ, ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನವ ಕಳ್ಳ ಸಾಗಣೆ ತಡೆ, ಭ್ರೂಣ ಹತ್ಯೆ ತಡೆ, ಬಾಲ್ಯ ವಿವಾಹ ತಡೆ, ಹೆಣ್ಣು ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ಇಂತಹ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರಬೇಕು. ಸಾರ್ವಜನಿಕರು ಕೂಡ ಯಾವುದೇ ಮೂಢನಂಬಿಕೆ ಅಥವಾ ಆಸೆ ಆಮಿಷಗಳಿಗೆ ಒಳಗಾಗದೆ ಮಕ್ಕಳ ರಕ್ಷಣೆ, ಭ್ರೂಣ ಹತ್ಯೆ ತಡೆಯಬೇಕು ಎಂದರು.

ಭ್ರೂಣ ಹತ್ಯೆ, ಬಾಲ್ಯ ವಿವಾಹ ಮುಂತಾದ ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದಲ್ಲಿ ಅಂತವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾನವ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು. ಮಾನವ ಕಳ್ಳಸಾಗಣೆ, ಭ್ರೂಣ ಹತ್ಯೆ ಇವುಗಳಿಂದ ಜಿಲ್ಲೆಯನ್ನು ಮುಕ್ತಗೊಳಿಸಬೇಕು. ಇದಕ್ಕಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ನೆಲಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಸೋನಿಯಾ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1000 ಪುರುಷರಿಗೆ 946 ಸ್ತ್ರೀಯರ ಸಂಖ್ಯೆವಿದೆ. ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಾವಸ್ಥೆ ಮಹಿಳೆಯರು ತಮ್ಮ ಮಗುವಿನ ಬೆಳವಣಿಗೆ ಬಗ್ಗೆ ಮಾತ್ರ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜಿ.ಪಂ ಸಿಇಒ ಕೆ.ಎನ್ ಅನುರಾಧಾ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ.ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾ ಲಕ್ಷ್ಮಿ ಎಸ್‌, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT