ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡ ನಿವಾರಣೆಗೆ ಉದ್ಯಾನ ವೀಕ್ಷಣೆ

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ
Last Updated 9 ನವೆಂಬರ್ 2020, 7:42 IST
ಅಕ್ಷರ ಗಾತ್ರ

ಆನೇಕಲ್ : ಉಪಚುನಾವಣೆಯಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದ ಕಂದಾಯ ಸಚಿವ ಆರ್‌.ಅಶೋಕ್‌ ಭಾನುವಾರ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಭೇಟಿ ನೀಡಿ ಅಲ್ಲಿನ ವಾತಾವರಣ ವೀಕ್ಷಿಸಿ ಉಲ್ಲಾಸಗೊಂಡರು.

ಮೃಗಾಲಯ, ಸಫಾರಿ, ಚಿಟ್ಟೆ ಪಾರ್ಕ್‌ಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಬನ್ನೇರುಘಟ್ಟದಲ್ಲಿನ ಸೌಲಭ್ಯಗಳ ಬಗ್ಗೆ ಅರಣ್ಯ ಇಲಾಖೆ ಮತ್ತು ಜೈವಿಕ ಉದ್ಯಾನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ನಂತರ ಮಾತನಾಡಿ, ಬನ್ನೇರುಘಟ್ಟ ಜೈವಿಕ ಉದ್ಯಾನ ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ಉದ್ಯಾನದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರತಿದಿನ 15-16 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ವಾರ್ಷಿಕವಾಗಿ ₹35ಕೋಟಿಗೂ ಹೆಚ್ಚು ಆದಾಯ ಬರುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಆದಾಯ ಕಡಿಮೆಯಾಗಿದೆ. ’ಕಳೆದ 15 ವರ್ಷಗಳ ನಂತರ ಜೈವಿಕ ಉದ್ಯಾನಕ್ಕೆ ಭೇಟಿ ನೀಡುತ್ತಿದ್ದೇನೆ. ಇಲ್ಲಿಯ ಸೌಲಭ್ಯಗಳು ಉತ್ತಮವಾಗಿವೆ. ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದರು.

ಈ ಹಿಂದೆ ಸಾರಿಗೆ ಸಚಿವರಾಗಿದ್ದ ಅವಧಿಯಲ್ಲಿ ₹5ಕೋಟಿ ವೆಚ್ಚದಲ್ಲಿ ಉದ್ಯಾನ ಸಮೀಪ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಸಾರಿಗೆ ಸೌಲಭ್ಯ ಹೆಚ್ಚಿಸಲಾಗಿದೆ. ಉಪಚುನಾವಣೆ ಒತ್ತಡದಿಂದ ಇಲ್ಲಿಗೆ ಭೇಟಿ ನೀಡಿದ್ದರಿಂದ ಮನಸ್ಸಿಗೆ ಮುದ ನೀಡಿದೆ ಎಂದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಬನ್ನೇರುಘಟ್ಟ ಸಮೀಪ ಹಳೆ ಸಂಪಿಗೆಹಳ್ಳಿಗೆ ಬಿಎಂಟಿಸಿ ಬಸ್‌ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ಹೊಸ ಬಡಾವಣೆಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಬಡಾವಣೆಗಳು ಮತ್ತು ಗ್ರಾಮೀಣ ಭಾಗಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.

ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀವಿಪಿನ್‌ಸಿಂಗ್‌, ಬಿಜೆಪಿ ಮಂಡಲ ಅಧ್ಯಕ್ಷ ರಾಜಶೇಖರರೆಡ್ಡಿ, ಮುಖಂಡರಾದ ಜಯರಾಮ್‌, ಗಣೇಶ್‌, ನಾಗೇಂದ್ರ ಇದ್ದರು.

’ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು’

ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಸರ್ಕಾರದ ಸಾಧನೆಗಳ ಬಗ್ಗೆ ಜನರು ವಿಶ್ವಾಸ ಹೊಂದಿದ್ದು ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಾಬೀತು ಮಾಡಲಿದ್ದಾರೆ ಎಂದು ಸಚಿವ ಆರ್‌.ಅಶೋಕ್‌ ತಿಳಿಸಿದರು.

ಚುನಾವಣೋತ್ತರ ಸಮೀಕ್ಷೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದೆ. ಆರ್‌ಆರ್‌ ನಗರದಲ್ಲಿ ಮುನಿರತ್ನ ಅವರು 35ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಹಾಗಾಗಿ ಮುಂದಿನ ಎರಡೂವರೆ ವರ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT