ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತಮ ಆಡಳಿತವೇ ಗೆಲುವಿಗೆ ಕಾರಣ’

ಬಿಜೆಪಿ ಕಾರ್ಯಕರ್ತರಿಂದ ನಗರದ ವಿವಿಧೆಡೆ ಸಂಭ್ರಮಾಚರಣೆ
Last Updated 24 ಮೇ 2019, 13:12 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಯ ಜಯಭೇರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿ.ಎನ್‌.ಬಚ್ಚೇಗೌಡ ಅವರ ಗೆಲುವನ್ನು ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನಗರದ ಹಳೇ ಬಸ್ ನಿಲ್ದಾಣದಲ್ಲಿ ನಡೆದ ಸಂಭ್ರಮೋತ್ಸವದಲ್ಲಿಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮಾತನಾಡಿ ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ವೀರಪ್ಪ ಮೊಯಿಲಿ ಅವರ ಸೋಲು, ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ತುಮಕೂರಿನಲ್ಲಿ ದೇವೇಗೌಡ ಮೊದಲಾದ ಘಟಾನುಘಟಿಗಳ ಸೋಲು ತಕ್ಕ ಪಾಠ ಕಲಿಸಿದೆ. ಕೇಂದ್ರದಲ್ಲಿ ಮೋದಿ ಮುಂದೆಯೂ ಉತ್ತಮ ಆಡಳಿತ ನೀಡಲಿದ್ದಾರೆ. ರಾಜ್ಯದಲ್ಲಿಯೂ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ನಗರ ಅಧ್ಯಕ್ಷ ಕೆ.ಎಚ್.ರಂಗರಾಜು, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ವತ್ಸಲಾ, ಮುಖಂಡರಾದ ಎಂ.ಕೆ.ರಮೇಶ್, ಸುನಿಲ್ ಕುಮಾರ್, ಪಿ.ವೆಂಕಟೇಶ್, ಲಕ್ಷ್ಮಿನಾರಾಯಣ್, ಸದಾಶಿವು, ಬಂತಿ ವೆಂಕಟೇಶ್, ಬಿಜೆಪಿ ಕಾರ್ಯಕರ್ತರು ಇದ್ದರು.

ಅಭಿವೃದ್ದಿ ಮರೆತವರಿಗೆ ತಕ್ಕ ಉತ್ತರ:

‘ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಹಾಗೂ ಕ್ಷೇತ್ರದಲ್ಲಿ ವೀರಪ್ಪ ಮೊಯಿಲಿ ಅವರ ವೈಫಲ್ಯವೇ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಅವರ ಗೆಲುವಿಗೆ ಕಾರಣ’ ಎಂದು ಬಿಜೆಪಿ ಹಿರಿಯ ಮುಖಂಡ ಜೆ.ನರಸಿಂಹಸ್ವಾಮಿ ಹೇಳಿದರು.

ನಗರದ ಸಿದ್ಧಲಿಂಗಯ್ಯ ಸರ್ಕಲ್‌ನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿಗೆ ದೊಡ್ಡಬಳ್ಳಾಪುರ ಸೇರಿದಂತೆ ಇಡೀ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಲ್ಲ ತಾಲ್ಲೂಕುಗಳಲ್ಲೂ ಬಚ್ಚೇಗೌಡರಿಗೆ ಹೆಚ್ಚಿನ ಮತಗಳು ಬಂದಿವೆ. ಮತದಾರರ ನಿರೀಕ್ಷೆಯಂತೆ ಬಚ್ಚೇಗೌಡರು ಉತ್ತಮ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಲಿದ್ದಾರೆ. ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿದ ಕ್ಷೇತ್ರದ ಮತದಾರರು ಅಭಿನಂದನೆಗೆ ಅರ್ಹರು’ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಟಿ.ವಿ.ಲಕ್ಷ್ಮಿನಾರಾಯಣ್‌, ಜೆ.ವೈ.ಮಲ್ಲಪ್ಪ, ಅಶ್ವತ್ಥ ನಾರಾಯಣಗೌಡ, ಕೆ.ಬಿ.ಮುದ್ದಪ್ಪ, ಪಿ.ಎಂ.ಪ್ರಕಾಶ್‌ ಕುಮಾರ್‌, ತಾಲ್ಲೂಕು ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಶಂಕರ್‌, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್‌.ಎಸ್‌.ಶಿವಶಂಕರ್‌, ಉಪಾಧ್ಯಕ್ಷ ಶಿವು, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್‌ ಬಿಜೆಪಿ ಅಭ್ಯರ್ಥಿಗೆ ಮತ ನೀಡಿದ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ವಿವಿಧೆಡೆ ಸಂಭ್ರಮಾಚರಣೆ: ತಾಲ್ಲೂಕಿನ ಕೊಡಿಗೇಹಳ್ಳಿ, ಮಾರಸಂದ್ರ, ಕನಸವಾಡಿ, ಉಜ್ಜನಿ ಹಾಗೂ ದೊಡ್ಡಬಳ್ಳಾಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬಣ್ಣದೋಕುಳಿಯೊಂದಿಗೆ ಸಂಭ್ರಮಾಚರಣೆ ಮಾಡಿದರು. ನಗರದ ಪ್ರಮುಖ ವೃತ್ತಗಳಲ್ಲಿ ಪಟಾಕಿಗಳನ್ನು ಸಿಡಿಸಿ, ಬೈಕ್‌ ರ್‍ಯಾಲಿ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT