ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಕೊಳವೆಬಾವಿಗೆ ಸರ್ಕಾರದ ನಿರ್ಬಂಧ

ಅನುಮತಿ ನೀಡುವಂತೆ ಒತ್ತಾಯಿಸಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಲಿರುವ ಶಾಸಕರ ತಂಡ
Last Updated 17 ಫೆಬ್ರುವರಿ 2021, 3:55 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಲಾಗುವುದು. ಅಲ್ಲದೆ, ಶೀಘ್ರ ಹಣ ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದ ಜಿಲ್ಲಾಮಟ್ಟದ ಕುಡಿಯುವ ನೀರಿನ ಟಾಸ್ಕ್ ಪೋಸ್೯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಜಿಲ್ಲಾಡಳಿತದ ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡ
ಲಾಗುವುದು. ಜಿಲ್ಲೆಯಲ್ಲಿ ಉಂಟಾಗ
ಬಹುದಾದ ಕುಡಿಯುವ ನೀರಿನ ಬವಣೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಜಿಲ್ಲಾ ವ್ಯಾಪ್ತಿಯ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗುತ್ತಿದೆ. ಅಂತಹ ಗ್ರಾಮಗಳ ಹೊರಗಿನ ಸರ್ಕಾರಿ ಪ್ರದೇಶದಲ್ಲಿ ಕೊಳವೆಬಾವಿ ಕೊರೆಸಲು ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೆರೆಗಳಿಗೆ ನೀರು ತುಂಬಿಸುವ ಕಾರ್ಯವಾಗಬೇಕು. ಇಲ್ಲವಾದಲ್ಲಿ ಕೆರೆಗಳು ಒಣಗುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಕೊಳವೆ ಬಾವಿಗಳು ಬತ್ತಿ ಹೋಗಲಿವೆ. ಅಧಿಕಾರಿಗಳು ಶೀಘ್ರ ಮೋಟಾರ್‌ ದುರಸ್ತಿಗೊಳಿಸಿ ನೀರು ತುಂಬಿಸುವ ಕಾರ್ಯ ಮಾಡಬೇಕು. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಶೇ25ರಷ್ಟು ಹಣ ಕುಡಿಯುವ ನೀರು ಪೂರೈಕೆಗೆ ಬಳಸಲು ಅವಕಾಶವಿದೆ. ತಾಲ್ಲೂಕು ಪಂಚಾಯಿತಿ ಇಒ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಿಳಿಸಿದರು.

ಶಾಸಕ ಶರತ್‌ಕುಮಾರ್ ಬಚ್ಚೇಗೌಡ ಮಾತನಾಡಿ, ತಾಲ್ಲೂಕಿನ ನಗರ ಭಾಗದಲ್ಲಿರುವ ದೊಡ್ಡಕೆರೆಯಲ್ಲಿ ನೀರಿನ ಮಟ್ಟ ಪ್ರತಿ ದಿನ ಇಳಿಕೆಯಾಗುತ್ತಿದೆ. ಅಧಿಕಾರಿಗಳು ಇಲ್ಲಿವರೆಗೂ ಯಾವುದೇ ರೀತಿ ಕ್ರಮಕೈಗೊಂಡಿಲ್ಲ. ಶೀಘ್ರ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಬೇಕು ಹಾಗೂ ಜಿಲ್ಲಾಡಳಿತದ ವತಿಯಿಂದ ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಕು ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು ಹಾಗೂ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 95 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕುಡಿಯುವ ನೀರು ಸರಬರಾಜು ಮಾಡಲು ಆರ್ಥಿಕ ಸಂಕಷ್ಟ ಎದುರಾಗಿದೆ.ಜಾನುವಾರುಗಳಿಗೂ ನೀರು ಸಿಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದು ಕೊಳವೆಬಾವಿ ಕೊರೆಸಲು ಅನುಮತಿ ನೀಡುವ ಕೆಲಸ ತುರ್ತಾಗಿ ಆಗಬೇಕಿದೆ ಎಂದರು.

ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತಾಗಿದೆ ಎಂದರು. ಅಲ್ಲದೆ, ನಗರಸಭೆಯಿಂದ ಹಣಕಾಸು ನೆರವು ಸಿಗದಿರುವುದರಿಂದ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ರೂಪಾ ಮರಿಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯ್ಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT