ಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ

7
ಅಸಂಘಟಿತ ಕಾರ್ಮಿಕ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ

ಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ

Published:
Updated:
Deccan Herald

ವಿಜಯಪುರ: ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರು ಸಂಘಟಿತರಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಘಟಕದ ನಿರ್ದೇಶಕ ಮುದುಗುರ್ಕಿ ನಾರಾಯಣಸ್ವಾಮಿ ಹೇಳಿದರು.

ಇಲ್ಲಿ ಭಾನುವಾರ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷ ಕಳೆದರೂ ಅಸಂಘಟಿತ ವಲಯದ ಕಾರ್ಮಿಕರು ಜಾಗೃತಿಯ ಕೊರತೆಯಿಂದಾಗಿ ತಮಗೆ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದ ಅವರು ಆರ್ಥಿಕವಾಗಿ ಹಿಂದುಳಿಯುವಂತಾಗಿದೆ ಎಂದು ಹೇಳಿದರು.

ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯವನ್ನು ಕಾಂಗ್ರೆಸ್ ಪಕ್ಷವು ಆರಂಭಿಸಿದೆ. ಅವರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಬೇಕು. ಸಂಘಟಿತರಾಗಿ ಸೌಲಭ್ಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯವಾಗುತ್ತದೆ. ಇದನ್ನು ಮನಗಂಡು ಸದಸ್ಯತ್ವ ಆರಂಭಿಸಿದ್ದು, ಯುವಕರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವುದರ ಜತೆಗೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಮೈ ಮುರಿದು ದುಡಿದರೂ ಕೆಲವು ಕುಟುಂಬಗಳು ಬಡತನದ ದಾಸ್ಯದಿಂದ ಹೊರ ಬರದೆ ಒದ್ದಾಡುತ್ತಿವೆ. ಪಿಂಚಣಿ, ಆರೋಗ್ಯ ವಿಮೆ, ಹೆರಿಗೆ ಭತ್ಯೆ, ಮಕ್ಕಳಿಗೆ ವಿದ್ಯಾರ್ಥಿ ವೇತನ, ಭವಿಷ್ಯ ನಿಧಿ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೆ ಬರೀ ದಿನಗೂಲಿ ಪಡೆದು ಮನೆಗೆ ತೆರಳಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ವರ್ಷ ಪೂರ್ತಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಮಿಕರ ಪರ ಧ್ವನಿ ಎತ್ತುತ್ತಿಲ್ಲ ಎಂದು ಆಕ್ಷೇಪಿಸಿದರು.

ಆದ್ದರಿಂದ ಕಾಂಗ್ರೆಸ್ ಪಕ್ಷವು ಅಸಂಘಟಿತ ಕಾರ್ಮಿಕರ ಸಮಿತಿಯನ್ನು ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು. ಬ್ಲಾಕ್ ಸಂಚಾಲಕ ಮಹೇಶ್, ನಗರ ಘಟಕದ ಸಂಚಾಲಕ ವೆಂಕಟೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !