ಶಾಂತಿಪುರ ಗ್ರಾ. ಪಂ. ಮೊದಲ ಸಭೆ: ಆಡಳಿತ ವ್ಯವಸ್ಥೆಗೆ ಕಾಯಕಲ್ಪ

7

ಶಾಂತಿಪುರ ಗ್ರಾ. ಪಂ. ಮೊದಲ ಸಭೆ: ಆಡಳಿತ ವ್ಯವಸ್ಥೆಗೆ ಕಾಯಕಲ್ಪ

Published:
Updated:
Deccan Herald

ಆನೇಕಲ್‌: ಆಡಳಿತ ವ್ಯವಸ್ಥೆಯು ಜಿಡ್ಡುಗಟ್ಟಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ಕಾಳಜಿ ವಹಿಸಬೇಕು. ಹಲವು ಸಮಸ್ಯೆಗಳನ್ನು ಗ್ರಾಮಸಭೆಯಲ್ಲಿ ಜನರು ಪ್ರಸ್ತಾಪ ಮಾಡುತ್ತಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿ ಮೊದಲನೇ ಸುತ್ತಿನ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಗ್ರಾಮಸಭೆಗಳು ಕೇವಲ ಕಾಟಾಚಾರಕ್ಕೆ ನಡೆಯಬಾರದು. ಕೇವಲ ಅರ್ಜಿ ಸ್ವೀಕಾರಕ್ಕೆ ಸೀಮಿತವಾದರೆ ಉಪಯೋಗವಿಲ್ಲ. ಗ್ರಾಮ ಸಭೆಗಳಲ್ಲಿ ಪ್ರಸ್ತಾಪವಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಾಗಬೇಕು. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 23 ಇಲಾಖೆಗಳಿದ್ದರೂ ಬೆರಳಣಿಕೆಯಷ್ಟೇ ಅಧಿಕಾರಿಗಳು ಸಭೆಯಲ್ಲಿರುವುದು ವಿಷಾದನೀಯ. ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ತಿಳಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿಗಳಿಗೆ ಆದಾಯ ಕಡಿಮೆ ಇದ್ದರೆ ಚುನಾಯಿತ ಪ್ರತಿನಿಧಿಗಳು ಸಚಿವರು, ಸಂಬಂಧಿಸಿದ ಇಲಾಖೆಗಳಿಗೆ ಪ್ರಸ್ತಾವ ಸಲ್ಲಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಶ್ರಮಿಸಬೇಕು. ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಒಗ್ಗೂಡಿ ಚರ್ಚೆ ಮಾಡಿ ಕ್ರಿಯಾ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಬೇಕು ಎಂದರು.

ಶಾಂತಿಪುರ ಗ್ರಾಮ ಪಂಚಾಯತಿ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಬೆಂಗಳೂರು ನಗರಕ್ಕೆ ಹೊಂದಿಕೊಂಡಿದೆ. ಹಾಗಾಗಿ ನಗರದ ಸೌಲಭ್ಯಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೊರೆಯುವಂತಾಗಲು ಎಲ್ಲರೂ ಶ್ರಮಿಸಬೇಕು ಎಂದರು.

ಜೀವ ವಿಮಾ ನಿಗಮದ ನಿವೃತ್ತ ವ್ಯವಸ್ಥಾಪಕ ವೇಣುಗೋಪಾಲ್ ಮಾತನಾಡಿ, ಶಾಸಕರು ಈ ಭಾಗಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಹಾಗಾಗಿ ರಸ್ತೆಗಳು ಅಭಿವೃದ್ಧಿಯಾಗಿವೆ. ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಆರ್ ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಪೈಪಿಗೆ ಚರಂಡಿ ನೀರು ಜೋಡಣೆಯಾಗಿದ್ದು, ಕೊಳಚೆ ನೀರು ಬರುತ್ತಿದೆ. ಹಾಗಾಗಿ ಕುಡಿಯುವ ನೀರು ಯೋಗ್ಯವಾಗಿಲ್ಲ. ಇದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ‘ತಮ್ಮ ಅನುದಾನದಲ್ಲಿ ₹5 ಲಕ್ಷ ಅನುದಾನ ನೀಡುವುದಾಗಿ’ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಾರಿಜಾತ ದೊರೆಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಉಪಾಧ್ಯಕ್ಷೆ ಮಂಜುಳ ಮೋಹನ್ ದಾಸ್, ಮುಖಂಡರಾದ ಚಿಕ್ಕನಾಗಮಂಗಲ ವೆಂಕಟೇಶ್, ಶಂಕಪ್ಪ, ಎಸ್.ಮದನ್, ಮಾರ್ಗಸೂಚಿ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !