ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

ದೊಡ್ಡಬಳ್ಳಾಪುರ: ‘ಶಿಕ್ಷಣದ ಮೂಲಕ ನಾವು ಬೆಳೆದು ಸಮಾಜವನ್ನೂ ಉತ್ತಮವಾಗಿ ಬೆಳೆಸಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡುವುದರೊಂದಿಗೆ ಅಗತ್ಯ ಕೌಶಲ ಅಳವಡಿಸಿಕೊಂಡರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ’ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜಿನ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಸಾಧನೆ ಮಾಡಿ ಊರಿಗೆ ಕೀರ್ತಿ ತರಬೇಕಿದೆ. ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವವರು ಹೆಚ್ಚಿನ ಮಂದಿ ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಅವರಿಗೆ ಉತ್ತಮ ಶಿಕ್ಷಣ ನೀಡುವ ಹೊಣೆ ಸರ್ಕಾರಕ್ಕಿದೆ ಎಂದು
ಹೇಳಿದರು.
ಕಾಲೇಜಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ತಾಲ್ಲೂಕಿನಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ತಾವು ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಯಕ್ಷಗಾನ ಕಲಾವಿದ ಕೆ.ಸಿ. ನಾರಾಯಣ್ ಮಾತನಾಡಿ, ಇಂದಿನ ಯುವಪೀಳಿಗೆ ನಮ್ಮ ಪಾರಂಪರಿಕ ಕಲೆಗಳಾದ ಯಕ್ಷಗಾನ, ನಾಟಕ, ಜನಪದ ಕಲೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕಿದೆ. ಮೂಡಲಪಾಯ ಯಕ್ಷಗಾನದಲ್ಲಿ ದೊಡ್ಡಬಳ್ಳಾಪುರ ಪ್ರಖ್ಯಾತಿ ಪಡೆದಿದೆ. ಇಲ್ಲಿ ಹಲವಾರು ಕಲಾವಿದರಿದ್ದಾರೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ಶ್ರೀನಿವಾಸಯ್ಯ ಮಾತನಾಡಿ, ಇಂದಿನ ಜಾಗತಿಕ ಯುಗದಲ್ಲಿ ಪಠ್ಯದೊಂದಿಗೆ ಭಾಷಾ ಕೌಶಲ, ಸಂವಹನ ಬೆಳೆಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಶಿಕ್ಷಣದಲ್ಲಿ ಕಲಿತ ಮತ್ತು ಪಡೆದ ಶಕ್ತಿಯನ್ನು ಮತ್ತೆ ಸಮಾಜಕ್ಕೆ ನೀಡುವ ಮೂಲಕ ಸಮಾಜವನ್ನು ಸಹ ಸಶಕ್ತಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಸದಾಶಿವ ರಾಮಚಂದ್ರಗೌಡ, ಸಿ. ರಾಮಚಂದ್ರಯ್ಯ, ನಾಗರಾಜು, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್, ಖಜಾಂಚಿ ಮಹೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.