ಗುರುವಾರ , ಆಗಸ್ಟ್ 11, 2022
27 °C

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್ : ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿರುವುದನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ತಾಲ್ಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಲ್ಲೂಕಿನಲ್ಲಿ ಅತ್ತಿಬೆಲೆ, ಬೊಮ್ಮಸಂದ್ರ, ಆನೇಕಲ್‌ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬೆಳಿಗ್ಗೆ ಕೆಲಕಾಲ ವಾಹನಗಳ ಸಂಚಾರ ವಿರಳವಾಗಿತ್ತು. 10ರ ನಂತರ ವಾಹನಗಳ ಸಂಚಾರ ಸಾಮಾನ್ಯ ಸ್ಥಿತಿಗೆ ತಲುಪಿತು. ಸಂತೆ ದಿನವಾದ ತಾಲ್ಲೂಕಿನ ಚಂದಾಪುರದಲ್ಲಿ ಜನರು ಖರೀದಿಯಲ್ಲಿ ತೊಡಗಿದ್ದರು. ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು.

ಆನೇಕಲ್‌, ಅತ್ತಿಬೆಲೆ, ಸರ್ಜಾಪುರ, ಜಿಗಣಿ, ಹೆಬ್ಬಗೋಡಿ, ಬೊಮ್ಮಸಂದ್ರ, ದೊಮ್ಮಸಂದ್ರ ಸೇರಿದಂತೆ ತಾಲ್ಲೂಕಿನ ಪ್ರಮುಖ ಸ್ಥಳಗಳಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಕನ್ನಡ ಬಾವುಟಗಳನ್ನು ಹಿಡಿದು ಪ್ರತಿಭಟನ ಮೆರವಣಿಗೆ ನಡೆಸಿದರು. ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದರು. ತಾಲ್ಲೂಕಿನ ಅತ್ತಿಬೆಲೆಗೆ ಬಂದ್‌ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಲಕ್ಷ್ಮೀಗಣೇಶ್‌, ಡಿವೈಎಸ್ಪಿ ಡಾ.ಎಚ್‌.ಎಂ.ಮಹದೇವಪ್ಪ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮ ಪರಿಶೀಲಿಸಿದರು.

ತಾಲ್ಲೂಕಿನ ಗಡಿಭಾಗ ಅತ್ತಿಬೆಲೆಯಲ್ಲಿ ಕನ್ನಡ ಪರ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಜಮಾವಣೆಗೊಂಡು ಗಡಿಯಲ್ಲಿ ಪ್ರತಿಭಟನೆ ನಡೆಸಿದರು.

ಮುಖಂಡ ಮಂಜುನಾಥ ದೇವ ಮಾತನಾಡಿ, ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದೆ. ಸಮಸ್ತೆ ಕನ್ನಡಿಗರ ಸ್ವಾಭಿಮಾನ ಕೆಣಕುವಂತೆ ಚುನಾವಣೆ ಮತಬ್ಯಾಂಕ್‌ಗಾಗಿ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿದೆ. ರಾಜ್ಯದ ಉಪಮುಖ್ಯಮಂತ್ರಿ ಅಶ್ವಥನಾರಾಯಣ್‌ ಅವರು ತಮಿಳು ಪ್ರಾಧಿಕಾರ ರಚಿಸುವುದಾಗಿ ತಿಳಿಸಿದ್ದಾರೆ. ಸರ್ಕಾರ ಜಾತಿಗೊಂದು, ಭಾಷೆಗೊಂದು ಪ್ರಾಧಿಕಾರ ರಚಿಸುವ ಬದಲು ಗಡಿಭಾಗದ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಜಾಗೃತಿ ವೇದಿಕೆ, ವಾಟಾಳ್‌ ನಾಗರಾಜ್‌ ಅಭಿಮಾನಿಗಳ ಬಳಗ, ಜಯ ಕರ್ನಾಟಕ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು