ಆನೇಕಲ್: ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಯಾವುದೇ ಮುಲಾಜಿಲ್ಲದೇ ತಕ್ಕ ಶಾಸ್ತಿ ಮಾಡಲಾಗುವುದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಜವಬ್ದಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ಎಂ.ಎಲ್.ಪುರುಷೋತ್ತಮ್ ತಿಳಿಸಿದರು.
ಪಟ್ಟಣದಲ್ಲಿ ರೌಡಿ ಪರೇಡ್ ನಡೆಸಿ ಮಾತನಾಡಿದ ಅವರು, ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕೆಲ ರೌಡಿಗಳು ಪುಂಡಾಟಿಕೆ ನಡೆಸಿದ್ದಾರೆ. ಲಾಂಗ್ ಮಚ್ಚು ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದಾರೆ. ಇಂತಹ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಇವರ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುವುದ ಎಂದು ಎಚ್ಚರಿಕೆ ನೀಡಿದರು.
ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರಿಗೆ ಗೂಂಡಾ ಕಾಯ್ದೆ ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಇತ್ತೀಚಿಗೆ ಜಮೀನುಗಳಿಗೆ ಬೇಲಿ ಹಾಕುವುದು, ಟೀ ಅಂಗಡಿಗಳು, ಬಾರ್‌ಗಳ ಬಳಿ ಕುಡಿದು ಗಲಾಟೆ ಮಾಡುವುದು, ಸುಲಿಗೆ, ಕೊಲೆ ಯತ್ನ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲಾಗಿದ್ದು ಕ್ರಮ ಕೈಗೊಳ್ಳಲಾಗುವುದು. ತಮ್ಮ ವರ್ತನೆಗಳನ್ನು ಬದಲಾಯಿಸಿಕೊಳ್ಳದಿದ್ದರೆ ಪೊಲೀಸ್ ಭಾಷೆಯಲ್ಲಿ ಉತ್ತರ ನೀಡಲಾಗುವುದು ಎಂದರು.
ಆನೇಕಲ್ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ಹಫ್ತಾ ವಸೂಲಿ, ದರೋಡೆ, ಗಾಂಜಾ ಮಾರಾಟ ಪ್ರಕರಣಗಳು ನಡೆದಿರುವ ಹಿನ್ನೆಲೆಯಲ್ಲಿ ಎಎಸ್ಪಿ ಪುರುಷೋತ್ತಮ್ ರೌಡಿಪರೇಡ್ ನಡೆಸಿ ರೌಡಿ ಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಚಂದ್ರಪ್ಪ, ಸಬ್‌ಇನ್‌ಸ್ಪೆಕ್ಟರ್ ಪ್ರದೀಪ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.