ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಲು ಸೂಚನೆ

ಪರೀಕ್ಷೆ ನಡೆಸಿ, ಹರಡಿಕೆ ತಡೆಗಟ್ಟಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ
Last Updated 22 ಮೇ 2021, 3:43 IST
ಅಕ್ಷರ ಗಾತ್ರ

ದೇವನಹಳ್ಳಿ/ ವಿಜಯಪುರ: ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ, ಕೋವಿಡ್ ಪರೀಕ್ಷೆ ಯನ್ನು ನಡೆಸುವುದರಿಂದ ಕೋವಿಡ್ ಪಸರಿಸುವಿಕೆಯನ್ನು ತಡೆಗಟ್ಟಬಹುದುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯ ಸರಿಯಾದ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಸಂಗ್ರಹಿಸಿ, ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರಿಗೆ ಸೂಕ್ತ ಸಮಯಕ್ಕೆ ವೈದ್ಯಕೀಯ ಕಿಟ್ ವಿತರಣೆ ಮಾಡಬೇಕು. ಪ್ರತಿ ದಿನ ದೂರವಾಣಿ ಮೂಲಕ ಸೋಂಕಿತರನ್ನು ಸಂಪರ್ಕಿಸಿ, ಅವರ ಆರೋಗ್ಯದ ಮಾಹಿತಿಯನ್ನು ಪಡೆಯಬೇಕು ಹಾಗೂ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಜಿಲ್ಲೆಯಲ್ಲಿರುವ ಆಮ್ಲಜನಕದ ಪೂರೈಕೆ, ಆಸ್ಪತ್ರೆಗಳು, ಹಾಸಿಗೆಗಳು ಹಾಗೂ ಕೋವಿಡ್ ಕೇರ್ ಸೆಂಟರ್‌ಗಳ ಮಾಹಿತಿ ಪಡೆದು ಕೋವಿಡ್ ಪಾಸಿಟಿವ್‌ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಅವರು, ಜಲಜೀವನ್ ಮಿಷನ್ ಯೋಜನೆಯಡಿ ಕೆರೆ, ಕುಂಟೆ, ಗೋಕಟ್ಟೆ, ನಾಲೆ ಹಾಗೂ ಕಲ್ಯಾಣಿಗಳ ಸ್ವಚ್ಛತೆ ಹಾಗೂ ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಬೇಕು ಮತ್ತು ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ತಾಲ್ಲೂಕುಗಳಿಗೆ ಆಮ್ಲಜನಕ ಕಾನ್ಸನ್ ಟ್ರೇಟರ್ ನೀಡಲಾಗಿದೆ. ಕೋವಿಡ್ ಲಕ್ಷಣಗಳುಳ್ಳ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ 10 ಸಾವಿರ ಮೆಡಿಕಲ್ ಕಿಟ್ ತಲುಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಾಲ್ಕು ತಾಲ್ಲೂಕುಗಳಿಗೆ ಒಟ್ಟು 60 ಮೊಬೈಲ್ ಕ್ಲಿನಿಕ್‌ಗಳ ಮೂಲಕ ವೈದ್ಯರ ತಂಡದಿಂದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಹಳ್ಳಿಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಕೋವಿಡ್ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಅಪರ ಪೋಲಿಸ್ ವರಿಷ್ಠಾಧಿಕಾರಿ ಲಕ್ಷೀ ಗಣೇಶ್, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ತಹಸೀಲ್ದಾರ್‌ಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT