ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಮರಸೂರು ಗ್ರಾ.ಪಂ.ನಿಂದ ‘ಮಕ್ಕಳ ಮನೆ’

ಸರ್ಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಆದ್ಯತೆ
Last Updated 2 ಜೂನ್ 2022, 8:46 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಪ್ರಾರಂಭಿಸಲಾದ ‘ಮಕ್ಕಳ ಮನೆ’ಪೂರ್ವ ಪ್ರಾಥಮಿಕ ತರಗತಿಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸರಿತಾ ವೆಂಕಟಸ್ವಾಮಿ ಬುಧವಾರ ಉದ್ಘಾಟಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸರಿತಾ ವೆಂಕಟಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಮೂಲಕ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಇದರಿಂದ ಗ್ರಾಮದ ಹಲವು ಕುಟುಂಬಗಳಿಗೆ
ಹಣ ಉಳಿತಾಯವಾದಂತಾಗಿದೆ. ಖಾಸಗಿ ಶಾಲೆಗಳಿಗಿಂತ ಮಿಗಿಲಾಗಿ ಶಿಕ್ಷಣವನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸರ್ಕಾರಿ ಶಾಲೆಯ ದಾಖಲಾತಿ ಹೆಚ್ಚಳವಾಗಿದೆ ಎಂದರು.

ಸರ್ಕಾರಿ ಶಾಲೆಗಳ ಬಗೆಗೆ ಕೀಳರಿಮೆ ತೋರದೇ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ಪಡೆಯಲು ಸಾರ್ವಜನಿಕರು ಸಹಕಾರ ನೀಡಬೇಕು. ಎಲ್ಲಾ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುರುಳಿ ಮಾತನಾಡಿ, ಮಕ್ಕಳ ಮನೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ, ಪಠ್ಯ ಪುಸ್ತಕ, ಸಮವಸ್ತ್ರ, ಬ್ಯಾಗ್‌, ಲೇಖನ ಸಾಮಗ್ರಿಗಳು ಮತ್ತು ಶಿಕ್ಷಕರಿಗೆ ವೇತನ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಮನೆಯನ್ನು ಮೊದಲಿಗೆ ಪ್ರಾರಂಭಿಸಿದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮರೆಡ್ಡಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಿದ ಜೆ.ಆರ್‌.ಡೆವಲಪರ್ಸ್‌ನ ಜಗದೀಶ್‌ರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಮಕ್ಕಳ ಮನೆಗೆ ಬಂದ ಪುಟಾಣಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಾಪುರ ರಾಮಚಂದ್ರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟಸ್ವಾಮಿರೆಡ್ಡಿ, ಸದಸ್ಯರಾದ ಪ್ರಭಾಕರರೆಡ್ಡಿ, ಮಣಿಕಂಠ, ರಶ್ಮಿ ಅನಿಲ್‌, ಬಂಡಾಪುರ ರಮೇಶ್‌ ರೆಡ್ಡಿ, ಸುಧಾ ಮುರಳಿ, ಮಂಜುಳ, ಚಂದ್ರಕಲಾ, ನಾಗಲಕ್ಷ್ಮೀ, ನಾಗರಾಜು, ಶಾಂತಮ್ಮ, ಮಂಜುನಾಥರೆಡ್ಡಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಟಿ.ಪಿ.ನಾಗರತ್ನಮ್ಮ, ಸಿಆರ್‌ಪಿ ಮುನಿಕೃಷ್ಣ ಇದ್ದರು.

ಆನೇಕಲ್‌ನ ನಾಲ್ಕು ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ : ಆನೇಕಲ್‌ ಪಟ್ಟಣದ ಹೊಸ ಮಾಧ್ಯಮಿಕ ಶಾಲೆ, ಹಳೆ ಮಾಧ್ಯಮಿಕ ಶಾಲೆ, ಬಾಲಕಿಯರ ಶಾಲೆ ಮತ್ತು ದೇವಾಂಗ ಪೇಟೆ ಸರ್ಕಾರಿ ಶಾಲೆ, ಬೊಮ್ಮಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ಪೂರ್ವ ಪ್ರಾಥಮಿಕ ಶಿಕ್ಷಣ ಸಹಕಾರಿಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎಚ್.ಮಂಜುನಾಥ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT