ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ

ರಾಯಸಂದ್ರ ಗ್ರಾಮದಲ್ಲಿ ₹ 8 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ
Last Updated 23 ಜನವರಿ 2020, 14:32 IST
ಅಕ್ಷರ ಗಾತ್ರ

ವಿಜಯಪುರ: ‘ಕ್ಷೇತ್ರದಲ್ಲಿನ ಪ್ರತಿಯೊಂದು ಹಳ್ಳಿಯಲ್ಲಿ ವಾಸ ಮಾಡುತ್ತಿರುವ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ ಗ್ರಾಮದಲ್ಲಿ ₹ 8 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸತತವಾಗಿ ಬರಗಾಲ ಎದುರಿಸುತ್ತಿರುವ ಕ್ಷೇತ್ರದಲ್ಲಿ ಅಂತರ್ಜಲ ಕುಸಿಯುತ್ತಿದೆ. ಕುಡಿಯುವ ನೀರಿಗಾಗಿ ಕೊಳವೆ ಬಾವಿ‌ ಅವಲಂಬಿಸಬೇಕಿರುವುದರಿಂದ ಕೊಳವೆಬಾವಿಗಳಲ್ಲಿ 1,800 ಅಡಿಗಳ ಆಳದಿಂದ ತೆಗೆಯುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ. ಅದು ಪ್ಲೋರೈಡ್‌ಯುಕ್ತವಾಗಿದ್ದು, ಈ ನೀರನ್ನು ಬಿಟ್ಟರೆ ಈ ಭಾಗದಲ್ಲಿನ ಜನ, ಜಾನುವಾರುಗಳಿಗೆ ಬೇರೆ ಮೂಲಗಳಿಂದ ಲಭಿಸುತ್ತಿಲ್ಲ. ಆದ್ದರಿಂದ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲು ಮುಂದಾಗಿದ್ದೇವೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಲಕ್ಷ್ಮೀನಾರಾಯಣಪ್ಪ ಮಾತನಾಡಿ, ‘ಮೂಲಸೌಕರ್ಯಗಳಾದ ಚರಂಡಿ, ರಸ್ತೆ, ಕುಡಿಯುವ ನೀರು, ಬೀದಿದೀಪ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಹೊಣೆಗಾರಿಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಅಳವಡಿಸುತ್ತಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಹಳ್ಳಿಗಳಿಗೆ ವಿಸ್ತರಿಸಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಸಿಗಬೇಕು ಎನ್ನುವ ಕಾರಣಕ್ಕೆ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು.

‘ಘಟಕಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ನೀರು ಪೋಲು ಮಾಡದೆ ಲಭ್ಯವಿರುವ ನೀರನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

ದೇವನಹಳ್ಳಿ ಪುರಸಭಾ ಸದಸ್ಯ ರವೀಂದ್ರ ಮಾತನಾಡಿ, ‘ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಮೂಲ್ ಒಕ್ಕೂಟದಿಂದಲೂ ಕೈ ಜೋಡಿಸಿರುವುದು ಶ್ಲಾಘನೀಯ. ಇಂತಹ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಕಟ್ಟಡವನ್ನು ಗುಣಮಟ್ಟದಿಂದ ನಿರ್ಮಾಣ ಮಾಡಿ, ನೀರು ಶುದ್ಧೀಕರಿಸುವ ಯಂತ್ರೋಪಕರಣಗಳು ಗುಣಮಟ್ಟದಲ್ಲಿ ಕೂಡಿರುವಂತೆ ನೋಡಿಕೊಳ್ಳಬೇಕು’ ಎಂದರು.

ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತ ಕುಮಾರಿ, ಚನ್ನರಾಯಪಟ್ಟಣ ಹೋಬಳಿ ಘಟಕದ ಜೆಡಿಎಸ್ ಅಧ್ಯಕ್ಷ ಮುನಿರಾಜು, ಜೆಡಿಎಸ್ ಮುಖಂಡರಾದ ರೆಡ್ಡಿಹಳ್ಳಿ ಮುನಿರಾಜು, ಶಿವಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT