ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ

ಅಮೃತ ಮಹೋತ್ಸವಕ್ಕೆ ಸಚಿವರಿಂದ ಚಾಲನೆ
Last Updated 19 ಆಗಸ್ಟ್ 2021, 3:47 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯದ ಜ್ಯೋತಿಯನ್ನು ದೇಶದ ಮೂಲೆ ‌ಮೂಲೆಯಲ್ಲಿ ಬೆಳಗಿಸಿದ್ದಾರೆ. ಇಂತಹ ಮಹನೀಯರ ಹೋರಾಟದ ಫಲವಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದೇವೆ. ಇದು ದೇಶದ ಪ್ರಗತಿಗೆ ಪ್ರೇರಣೆಯಾಗಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್ ಆಶಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಜನರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ನಿರಂತರವಾಗಿ ಹೋರಾಟ ಮಾಡಿದ ಹೋರಾಟಗಾರರ ಜೀವನ ಚರಿತ್ರೆಯನ್ನು ಯುವಪೀಳಿಗೆಯು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಯುವಜನರು ದೇಶದ ಆಸ್ತಿ. ಅವರನ್ನು ಗಟ್ಟಿಗೊಳಿಸಿ ಸಶಕ್ತರನ್ನಾಗಿ ಮಾಡುವಂತಹ ಹೊಣೆಗಾರಿಕೆಯೂ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಎಂಬ ಬಿಡುಗಡೆಯು ಸುಲಭವಾಗಿ ದಕ್ಕಲಿಲ್ಲ ಎನ್ನುವುದು ಎಲ್ಲರಿಗೂ ಮನವರಿಕೆಯಾಗಬೇಕು. ದೇಶದ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಸರ್ಕಾರಗಳೊಂದಿಗೆ ನಿರಂತರವಾಗಿ ಸಹಕಾರ ನೀಡಬೇಕು ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಸಂವಿಧಾನ ಮತ್ತು ಪ್ರಜಾತಂತ್ರದ ಮೇಲೆ ನಮಗೆ ಗೌರವವಿದೆ. ಅದನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡಬೇಕು. ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶ, ವೈದ್ಯಕೀಯ, ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸಾಧನೆ ಮತ್ತಷ್ಟು ಹೆಚ್ಚಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾತನಾಡಿ, ಅಸಂಖ್ಯಾತ ಜನರ ತ್ಯಾಗ, ಬಲಿದಾನದ ಸ್ಮರಣೆಯು ದೇಶದಲ್ಲಿ ಏಕಕಾಲಕ್ಕೆ ನಡೆಯುತ್ತಿದೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕೆ ಬಲಿದಾನಗೈದ ಮಹನೀಯರನ್ನು ನಾವು ಸ್ಮರಿಸಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿದರು. ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT