ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ ಆಸ್ಪತ್ರೆ ಮೇಲ್ದರ್ಜೆಗೆ: ಕೆ.ಎಚ್‌.ಮುನಿಯಪ್ಪ

ಇಂದ್ರಧನುಷ್‌ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಕೆ.ಎಚ್‌.ಮುನಿಯಪ್ಪ
Published 7 ಆಗಸ್ಟ್ 2023, 13:37 IST
Last Updated 7 ಆಗಸ್ಟ್ 2023, 13:37 IST
ಅಕ್ಷರ ಗಾತ್ರ

ದೇವನಹಳ್ಳಿ: ದೇವನಹಳ್ಳಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಲಸಿಕಾ ಸಂಗ್ರಹ ಜಿಲ್ಲಾ ಉಗ್ರಾಣ ಹಾಗೂ ಜಿಲ್ಲಾ ಮಟ್ಟದ ಪ್ರಯೋಗಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಿಷನ್ ಇಂದ್ರ ಧನುಷ್ ಲಸಿಕಾ ಅಭಿಯಾನ 5.0 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕು ಆಸ್ಪತ್ರೆಯಲ್ಲಿ ತಾಯಿ ಮಗು ಆಸ್ಪತ್ರೆ ಮತ್ತು ಆಮ್ಲಜನಕ ಘಟಕ ಇದೆ. ಎರಡು ರಾಷ್ಟ್ರೀಯ ಹೆದ್ದಾರಿ, ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣಕ್ಕೂ ಹತ್ತಿರವಾಗಿದೆ. ಹೀಗಾಗಿ ತ್ವರಿತ ಮತ್ತು ಗುಣಮಟ್ಟದ ಚಿಕಿತ್ಸೆ ಒದಗಿಲು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.

ರೋಗ ರಹಿತ ದೇಶ ನಿರ್ಮಾಣ ಹಾಗೂ ಮಕ್ಕಳನ್ನು ಮಾರಣಾಂತಿಕ ಕಾಯಿಲೆಗಳಿಂದ ರಕ್ಷಿಸಿ ರೋಗ ನಿರೋಧಕಾ ಶಕ್ತಿ ಹೆಚ್ಚಿಸಲು ಇಂದ್ರಧನುಷ್‌ ಲಸಿಕೆ ಸಹಕಾರಿಯಾಗಿದೆ. ಹೀಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಇಂದ್ರಧನುಷ್ ಅಭಿಯಾನ ಮೂರು ತಿಂಗಳ ಕಾಲ ನಡೆಯಲಿದ್ದು, ಮೂರು ಹಂತಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಜಿಲ್ಲೆಯಲ್ಲಿನ ಪ್ರತಿಯೊಂದು ಮಗುವಿಗೂ ಲಸಿಕೆ ಹಾಕಬೇಕು. ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದರು.

ಲಸಿಕೆ ಹಾಕಿಸುವುದರಿಂದ 11 ಮಾರಣಾಂತಿಕ ರೋಗಗಳಿಂದ ಮಕ್ಕಳನ್ನು ರಕ್ಷಿಸಿಸಬಹುದು ಎಂದರು.

ಶ್ರೀಸಾಮಾನ್ಯರ ಆರೋಗ್ಯ ಕಾಪಾಡುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ. ಅದರಲ್ಲಿ ಯಾವುದೇ ರಾಜಿ ಮಾತೇ ಇರುವುದಿಲ್ಲ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್‌, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ದೇವನಹಳ್ಳಿ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ, ಡಾ.ಶ್ರೀನಿವಾಸ್, ಡಾ.ಆನಂದ್, ಜ್ಞಾನಕುಮಾರ್, ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ಸದಸ್ಯರಾದ ಬಾಲರಾಜ್, ಗೋಪಾಲಕೃಷ್ಣ, ಸುಮಿತ್ರಾ ಮಂಜುನಾಥ, ಜಿ.ಪಂ. ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಚನ್ನರಾಯಪಟ್ಟಣ ವಿಎಸ್ಸೆಸ್ಸೆನ್‌ ನಿರ್ದೇಶಕಾದ ಅಶ್ವಥಪ್ಪ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಇದ್ದರು.

506 ಕೇಂದ್ರಗಳಲ್ಲಿ ಲಸಿಕೆ
ಜಿಲ್ಲೆಯಾದ್ಯಂತ ಮೊದಲನೇ ಸುತ್ತಿನ ಲಸಿಕಾಕರಣದಲ್ಲಿ 517 ಗರ್ಭಿಣಿ ಮಹಿಳೆಯರು 2 ವರ್ಷದೊಳಗಿನ 1598 ಮಕ್ಕಳು ಮತ್ತು 2 ರಿಂದ 5 ವರ್ಷದೊಳಗಿನ 43 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 506 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜೇಂದ್ರ ತಿಳಿಸಿದರು. ಯಾವುದೇ ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಆರೋಗ್ಯವಂತ ಸಮಾಜ ನಿರ್ಮಿಸುವುದು ಅಭಿಯಾನದ ಗುರಿಯಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT