ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಬೊಮ್ಮಸಂದ್ರಕ್ಕೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಭರವಸೆ

ಕೈಗಾರಿಕೆ ಪ್ರದೇಶಕ್ಕೆ ನಿರಾಣಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿಯಾದರೆ ಕಂಪನಿಗಳು ಹೂಡಿಕೆ ಮಾಡುತ್ತವೆ. ಇದರಿಂದ ಉದ್ಯೋಗ ಸೃಷ್ಟಿ ಮತ್ತು ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಯಾಗುತ್ತದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದರು.

ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದರು.

ಕೈಗಾರಿಕಾ ಪ್ರದೇಶಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹರಿಸುವ ಸಲುವಾಗಿ ಪ್ರತಿವಾರ ಒಂದೊಂದು ಪ್ರದೇಶಕ್ಕೆ ಭೇಟಿ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಡದಿ, ಹಾರೋಹಳ್ಳಿ, ಜಿಗಣಿ ಮತ್ತು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ ಎಂದು
ಹೇಳಿದರು.

ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕ ರಸ್ತೆಗಳು, ಸಿಸಿ ಕ್ಯಾಮೆರಾ, ಬೀದಿ ದೀಪ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವುದು. ಸ್ಥಳೀಯ ಸಂಸ್ಥೆಗಳು ಮತ್ತು ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿಗಳು ಒಗ್ಗೂಡಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಕೃಷಿ ಭೂಮಿ ಮತ್ತು ರೈತರ ವಿರೋಧವಿರುವ ಜಮೀನುಗಳನ್ನು ಕೈಗಾರಿಕೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ. ಭೂಸ್ವಾಧೀನ ಸಂದರ್ಭದಲ್ಲಿ ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ನೀತಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳು ಅಭಿವೃದ್ಧಿಯಾಗಬೇಕು ಎಂದರು.

ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ.ಪ್ರಸಾದ್‌ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಿಕೊಡಬೇಕು. ಕಾಚನಾಯಕನಹಳ್ಳಿ ಕೈಗಾರಿಕ ಉಪಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು. ಕೈಗಾರಿಕೆಗಳಿಗೆ ಮಾನವ ಸಂಪನ್ಮೂಲ ಸುಲಭವಾಗಿ ದೊರೆಯುವ ನಿಟ್ಟಿನಲ್ಲಿ ಪ್ರತಿ ಪ್ರದೇಶದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರಗಳನ್ನು ತೆರೆಯಬೇಕು ಎಂದು ಮನವಿ ಮಾಡಿದರು.

ಬೊಮ್ಮಸಂದ್ರ ಪುರಸಭಾ ಅಧ್ಯಕ್ಷ ವಸಂತ್‌ಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್‌, ಸದಸ್ಯ ಪ್ರದೀಪ್‌, ಮುಖಂಡ ಬಿ.ಬಿ.ಐ. ಮುನಿರೆಡ್ಡಿ, ಕೈಗಾರಿಕಾ ಸಂಘದ ಪದಾಧಿಕಾರಿಗಳಾದ ಸಂಜೀವ್‌ ಸಾವಂತ್, ಮುರಳೀಧರ್, ಪುನೀತ್‌ ಪ್ರಸಾದ್, ರಾಜು ಮಡಿಕೇರಿ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.