ರಸ್ತೆಗಳ ಅಭಿವೃದ್ಧಿಗೆ ಹಣ ನೀಡದ ಕೇಂದ್ರ: ಶಾಸಕ ವೆಂಕಟರಮಣಯ್ಯ ಆಕ್ಷೇಪ

7
ಹೊಸಹಳ್ಳಿ: ಮೊದಲ ಹಂತದ ಗ್ರಾಮ ಸಭೆ

ರಸ್ತೆಗಳ ಅಭಿವೃದ್ಧಿಗೆ ಹಣ ನೀಡದ ಕೇಂದ್ರ: ಶಾಸಕ ವೆಂಕಟರಮಣಯ್ಯ ಆಕ್ಷೇಪ

Published:
Updated:
Deccan Herald

ದೊಡ್ಡಬಳ್ಳಾಪುರ: ಐದು ವರ್ಷಗಳ ಆಡಳಿತದಲ್ಲಿ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಯಾವುದೇ ಅನುದಾನ ನೀಡಿಲ್ಲ. ಶಾಸಕರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುದಾನದಲ್ಲಿಯೇ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಮೊದಲ ಹಂತದ ಗ್ರಾಮ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಪ್ರತಿ ತಾಲ್ಲೂಕಿಗೆ 20ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ದೊರೆಯುತಿತ್ತು. ಆದರೆ, ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ರಾಮೀಣ ರಸ್ತೆಗಳನ್ನೇ ಮರೆತಿದೆ ಎಂದು ದೂರಿದರು.

ತಾಲ್ಲೂಕಿನಲ್ಲಿ ಇರುವ ಲೋಕೋಪಯೋಗಿ ಇಲಾಖೆಗೆ ಒಳಪಟ್ಟಿರುವ ಎಲ್ಲ ರಸ್ತೆಗಳ ಅಭಿವೃದ್ಧಿಯಾಗಿವೆ. ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಕಡೆಗೆ ಈಗ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ತಹಶೀಲ್ದಾರ್ ಬಿ.ಎ.ಮೋಹನ್ ಮಾತನಾಡಿ, ಜನಪ್ರತಿನಿಧಿಗಳ ಸಹಕಾರದಿಂದ ತಾಲ್ಲೂಕಿನಲ್ಲಿ 7 ಸಾವಿರ ರೇಷನ್ ಕಾರ್ಡ್ ವಿತರಣೆ, ಸಾಮಾಜಿಕ ಭದ್ರಾಯ ಯೋಜನೆಯಡಿಯಲ್ಲಿ 49 ಸಾವಿರ ಮಂದಿಗೆ ಪಿಂಚಣಿ ನೀಡಲಾಗುತ್ತಿದೆ. ಅಕ್ರಮ ಸಕ್ರಮ ಯೋಜನೆಯಲ್ಲಿ 94ಸಿಸಿ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರ ವಿತರಣೆ, ಫಾರಂ 53ಅಡಿಯಲ್ಲಿ ಗೇಣಿ ಅರ್ಜಿಸಲ್ಲಿಸಿರುವ 800 ಜನ ರೈತರಿಗೆ ಭೂ ಮಂಜೂರಾತಿ ಹಕ್ಕುಪತ್ರ ತ್ವರಿತವಾಗಿ ವಿತರಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಯುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಬಾಲ್ಯ ವಿವಾಹ ಅಪರಾಧವಾಗಿದ್ದು ಇಂತಹ ಕಾರ್ಯಗಳನ್ನು ಮಾಡುವವರು ಹಾಗೂ ಅದರಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಜಯಪಾಲ ಮಾತನಾಡಿ, ನರೇಗಾ ಯೋಜನೆಯಡಿಯಲ್ಲಿ ಕೊಟ್ಟಿಗೆ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿವೆ. ಇವುಗಳನ್ನು ಬಳಸಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ, ಪಶುಪಾಲನೆ, ತೋಟಗಾರಿಕೆ, ಮೀನುಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ತಮ್ಮ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಸಿ.ಶ್ರೀವತ್ಸ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಎಚ್.ಸಿ.ಕೃಷ್ಣಪ್ಪ, ಪಿಡಿಒ ನಿರಂಜನ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಬೈರೇಗೌಡ, ಮುಖಂಡರಾದ ಅಣ್ಣಯ್ಯಪ್ಪ, ವೆಂಕಟಚಾಲಯ್ಯ, ನರಸಿಂಹಮೂರ್ತಿ, ನಾಗರಾಜ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !