ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕರ ರಕ್ಷಣೆಗೆ ಸೂಚನೆ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಜಗದೀಶ್‌ ಕೆ. ನಾಯ್ಕ್‌
Last Updated 25 ಫೆಬ್ರುವರಿ 2021, 4:37 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲೆಯಲ್ಲಿ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಬಾಲಕಾರ್ಮಿಕರನ್ನು ಪತ್ತೆಹಚ್ಚಿ ರಕ್ಷಿಸುವುದರೊಂದಿಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ. ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನಡೆದ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಗ್ಯಾರೇಜ್, ನರ್ಸರಿ, ಇಟ್ಟಿಗೆ ಭಟ್ಟಿ, ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ದಾಳಿ ವೇಳೆ ಬಾಲಕಾರ್ಮಿಕರು ಕಂಡುಬಂದರೆ ವಶಕ್ಕೆ ಪಡೆದು, ಶಿಕ್ಷಣ ಕೊಡಿಸುವಂತೆ ಪಾಲಕರಿಗೆ ಅರಿವು ಮೂಡಿಸಬೇಕು ಎಂದರು.

ಪ್ರತಿ ಮೂರು ತಿಂಗಳಿಗೆ ಕಡ್ಡಾಯವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಮಿಕ ನಿರೀಕ್ಷಕರ ತಾಲ್ಲೂಕುಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಮಕ್ಕಳ ಸಹಾಯವಾಣಿ 1098ಕ್ಕೆ ಬರುವ ದೂರು ಸ್ವೀಕರಿಸಿದ ತಕ್ಷಣವೇ ವಿಳಂಬ ಮಾಡದೆ ಕಾರ್ಯಪ್ರವೃತ್ತರಾಗಬೇಕು. ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸುವುದರಿಂದ ಬಾಲಕಾರ್ಮಿಕರನ್ನು ರಕ್ಷಿಸಲು ಸಹಾಯವಾಗುತ್ತದೆ ಎಂದರು.

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ‌ಕಾಯ್ದೆ 2016ರ ಕಲಂ16 ಮತ್ತು17 ಅಡಿಯಲ್ಲಿ ನೇಮಕಗೊಂಡ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಹಯೋಗದೊಂದಿಗೆ ಆಯೋಜಿಸಬೇಕು ಎಂದು ತಿಳಿಸಿದರು.

ಕಾರ್ಮಿಕ ಇಲಾಖೆ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಕಿರಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎನ್.ಎಸ್. ಮಹೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT