ಕಸಾಯಿಖಾನೆ ತ್ಯಾಜ್ಯ ವಿಲೇವಾರಿಗೆ ಸೂಚನೆ

ದೇವನಹಳ್ಳಿ: ಕಸಾಯಿಖಾನೆ ಹಾಗೂ ಕೋಳಿ ತ್ಯಾಜ್ಯವನ್ನು ರಸ್ತೆಬದಿಯಲ್ಲಿ ಸುರಿಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯ್ಕ ಸೂಚಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಸಂಗೋಪನಾ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಜಿಲ್ಲೆಯಲ್ಲಿನ ಗೋಶಾಲೆಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಕಸಾಯಿಖಾನೆಗಳಿದ್ದರೆ ಪರವಾನಗಿ ಪಡೆಯುವುದು ಕಡ್ಡಾಯ. ಪಡೆಯದಿದ್ದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಜಿ.ಎಂ. ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್, ಶ್ರೀಗೋಕುಲ ಸೇವಾ ಸಮಿತಿ ಟ್ರಸ್ಟ್, ಶ್ರೀಸ್ವರ್ಣಾಂಭ ವಿದ್ಯಾ ಗುರುಕುಲ, ಶ್ರೀಓಂಕಾರ ಚಾರಿಟಬಲ್ ಟ್ರಸ್ಟ್ ಸೇರಿದಂತೆ ನಾಲ್ಕು ಗೋಶಾಲೆಗಳು 2020-21ನೇ ಸಾಲಿನಲ್ಲಿ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿವೆ. ನಾಲ್ಕು ಗೋಶಾಲೆಗಳಿಗೆ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಹಾವು, ನವಿಲು, ಕೋತಿ ಮುಂತಾದ ಪ್ರಾಣಿಗಳನ್ನು ಹಿಡಿದು ನಗರ ಪ್ರದೇಶಗಳಲ್ಲಿ ಆಹಾರ ಹಾಗೂ ಇತರೆ ಉದ್ದೇಶಗಳಿಗೆ ಬಳಕೆ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸಲು ಪೊಲೀಸ್ ಹಾಗೂ ಅರಣ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದು ಜಿಲ್ಲಾ ಸಾಕು ಪ್ರಾಣಿಗಳ ಸಂಘದ ಸದಸ್ಯರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ಪಶು ಇಲಾಖೆಯ ತಾಂತ್ರಿಕ ಸಹಾಯಕ ನಿರ್ದೇಶಕ ಡಾ.ಅನಿಲ್‌ಕುಮಾರ್, ಜಿಲ್ಲೆಯ ಗೋಶಾಲೆಗಳ ಮುಖ್ಯಸ್ಥರು ಹಾಜರಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.