ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಸಂಘ, ಸಂಸ್ಥೆಗಳು ಕೈಜೋಡಿಸಬೇಕು

ಗ್ರಾಮೀಣ ಪ್ರದೇಶದ ಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
Last Updated 22 ಮೇ 2021, 3:43 IST
ಅಕ್ಷರ ಗಾತ್ರ

ದೇವನಹಳ್ಳಿ/ವಿಜಯಪುರ: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸರ್ಕಾರೇತರ ಸಂಘ-ಸಂಸ್ಥೆಗಳು ಕೇಂದ್ರೀಕೃತವಾಗಿ ಕಾರ್ಯನಿರ್ವಹಿಸುವ ಮೂಲಕ ಕೋವಿಡ್ ನಿರ್ಮೂಲನೆಗೆ ಮಾಡಲು ಶ್ರಮಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರೇತರ ಸಂಘ-ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಕಿಟ್, ಮಾಸ್ಕ್ ಮುಂತಾದವುಗಳನ್ನು ತಾಲ್ಲೂಕು ಆಡಳಿತದೊಂದಿಗೆ ಸಮಾಲೋಚಿಸಿ, ಎಲ್ಲರೂ ಒಟ್ಟಾಗಿ ಫಲಾನುಭವಿಗಳಿಗೆ ತಲುಪಿಸುವಂತೆ ಸೂಚನೆ ನೀಡಿದರು.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಗೆ ಆಮ್ಲಜನಕ ಕಾನ್ಸನ್‌ಟ್ರೇಟರ್ ನೀಡಲಾಗಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಹತ್ತು ಸಾವಿರ ಕೋವಿಡ್ ಮೆಡಿಕಲ್ ಕಿಟ್ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮೆಡಿಕಲ್ ಕಿಟ್ ತಯಾರಿಸಲು ಸೂಚನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಔಷಧಿಗಳ ಕೊರತೆ ಇಲ್ಲ ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಮೊಬೈಲ್ ಕ್ಲಿನಿಕ್ ಮೂಲಕ ವೈದ್ಯರ ತಂಡ ಪ್ರತಿ ಹಳ್ಳಿಯನ್ನು ತಲುಪುತ್ತಿದ್ದು, ಗ್ರಾಮೀಣ ಜನರಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮೆಡಿಕಲ್ ಕಿಟ್ ತಲುಪಿಸಲಾಗುತ್ತಿದೆ. ಕೋವಿಡ್ ಲಕ್ಷಣಗಳು ಕಂಡುಬಂದವರನ್ನು ಕೋವಿಡ್ ಕೇರ್ ಸೆಂಟರ್‌ಗೆ
ದಾಖಲಿಸಲು ಸೂಚನೆ ನೀಡಲಾಗಿದೆ. ವೃದ್ಧಾಶ್ರಮ, ಅಂಗವಿಕಲರು ಹಾಗೂ ಬುದ್ಧಿಮಾಂದ್ಯ ನಿಲಯಗಳಿಗೆ ಜಿಲ್ಲಾಡಳಿತದ ವತಿಯಿಂದಲೇ ಅವರು ಇದ್ದಲ್ಲಿಗೆ ತೆರಳಿ ಲಸಿಕೆ ಹಾಕಲಾಗುವುದು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿರುವ ಸಹಾಯವಾಣಿಯನ್ನು ದೊಡ್ಡಬಳ್ಳಾಪುರ ಡಿವೈಎಸ್ಪಿ ಕಚೇರಿಗೆ ಶೀಘ್ರವೇ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು. 18 ರಿಂದ 44 ವಯಸ್ಸಿನವರಿಗೆ ಶೀಘ್ರವೇ ಲಸಿಕೆ ವಿತರಿಸಲಾಗುವುದು ಎಂದರಲ್ಲದೆ, ಅಂಗವಿಕಲರನ್ನು ಗುರುತಿಸಿ ಪಟ್ಟಿ ನೀಡಿದರೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುವುದು ಎಂದರು.

ಒಂದು ಕೇಂದ್ರದಲ್ಲಿ ಗರಿಷ್ಠ 200 ಮಂದಿಗೆ ಲಸಿಕೆ ನೀಡಲಾಗುವುದು ಹಾಗೂ ಹೆಚ್ಚು ಜನರನ್ನು ಲಸಿಕೆ ನೀಡುವ ಸ್ಥಳದಲ್ಲಿ ಸೇರುವಂತೆ ಮಾಡುವುದು ಬೇಡ ಎಂದರು. ಅಂಗವಿಕಲರಿಗೆ ಹಾಗೂ ವೃದ್ಧರಿಗೆ ನೆರವಾಗುವಂತೆ ಪ್ರತಿ ತಾಲ್ಲೂಕಿಗೆ ಒಂದರಂತೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು. ಅಲ್ಲದೆ, ಯಾವುದೇ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಜಿಲ್ಲೆಯಲ್ಲಿ ಈಗಾಗಲೇ 56 ಆಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಸುವಂತೆ ತಿಳಿಸಿದರು ಹಾಗೂ ಸಂಘ ಸಂಸ್ಥೆಗಳು ಕೋವಿಡ್ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರಲ್ಲದೆ ವಿಡಿಯೊ ಕರೆ ಮೂಲಕ ಆರೈಕೆ ಮಾಡುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಸರ್ಕಾರೇತರ ಸಂಸ್ಥೆಗಳು ವೈಯಕ್ತಿಕವಾಗಿ ಕಾರ್ಯ ನಿರ್ವಹಿಸದೇ ಸಮಾಜ ಕಲ್ಯಾಣ ಇಲಾಖೆ, ವಿಕಲಚೇತನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸುವುದರೊಂದಿಗೆ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳ ಅನ್ವಯ ಕೋವಿಡ್ ಲಸಿಕೆಯನ್ನು ನೀಡಲಾಗುವುದು, ಈ ಕುರಿತು ಸಂಘ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಹಾಗೂ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಅದನ್ನು ಹೋಗಲಾಡಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ‌.ನಾಯಕ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ಜಗದೀಶ ಸೇರಿದಂತೆ ನೋಡಲ್ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT