ಭಾನುವಾರ, ಅಕ್ಟೋಬರ್ 2, 2022
19 °C
ದೊಡ್ಡಬಳ್ಳಾಪುರ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಾಳೆ

ಸುಧಾಕರ್‌ ಹೇಳಿಕೆಗೆ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವ ಕುರಿತು ನೀಡಿರುವ ಹೇಳಿಕೆಗೆ ನಗರದ ಕನ್ನಡ ಜಾಗೃತ ಭವನದಲ್ಲಿ ಬುಧವಾರ ನಡೆದ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷದ ಮುಖಂಡರ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಆ.  19ರಂದು ಬೆಳಿಗ್ಗೆ 10ಗಂಟೆಗೆ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಯಿತು.

ಕನ್ನಡ ಜಾಗೃತ ಪರಿಷತ್‌ ಅಧ್ಯಕ್ಷ ಕೆ. ವೆಂಕಟೇಶ್ ಮಾತನಾಡಿ, ಸುಧಾಕರ್ ಯಾವುದೇ ಜನಾಭಿಪ್ರಾಯ ಪರಿಗಣಿಸದೆ ಸರ್ವಾಧಿಕಾರಿ ಧೋರಣೆಯಿಂದ ನೀಡಿರುವ ಹೇಳಿಕೆಯನ್ನು ಸಭೆಯು ಖಂಡಿಸುತ್ತದೆ. ಆ. 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಸುಧಾಕರ್, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್, ಕಂದಾಯ ಸಚಿವ ಅಶೋಕ ಭಾಗವಹಿಸಲಿದ್ದಾರೆ. ಜಿಲ್ಲಾ ಕೇಂದ್ರದ ವಿಚಾರದಲ್ಲಿ ಸಚಿವರ ಹೇಳಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಬೇಕಿದೆ ಎಂದು ಆಗ್ರಹಿಸಿದರು.

ಜಿಲ್ಲಾ ಕೇಂದ್ರವಾಗಿ ದೊಡ್ಡಬಳ್ಳಾಪುರವಾದರೆ ಜನರಿಗೆ ಆಗುವ ಅನುಕೂಲ ಹಾಗೂ ಜಿಲ್ಲಾ ಕೇಂದ್ರಕ್ಕೆ ಇರಬೇಕಾದ ಮಾನದಂಡ ಕುರಿತು ಸಂಬಂಧಪಟ್ಟವರು ಪರಾಮರ್ಶಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಿ.ಎಸ್. ರವಿಕುಮಾರ್, ಜಿಲ್ಲಾ ಕೇಂದ್ರದ ವಿಚಾರದಲ್ಲಿ ಸಚಿವರ ಹೇಳಿಕೆಯನ್ನು ಜೆಡಿಎಸ್ ಖಂಡಿಸುತ್ತದೆ. ಇದು ಪಕ್ಷಾತೀತವಾಗಿ ನಡೆಯಬೇಕಾಗಿರುವ ಹೋರಾಟ. ನಗರಸಭಾ ಸದಸ್ಯರು ತುರ್ತುಸಭೆ ಕರೆದು ಈ ಬಗ್ಗೆ ಠರಾವು ಮಂಡಿಸಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ಬಿ.ಜಿ. ಹೇಮಂತರಾಜು, ರಾಮಣ್ಣ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್ನುವ ಹೆಸರು ಸೂಕ್ತವಾಗಿದೆ. ಹೆಸರು ಬದಲಾವಣೆ ಬೇಡ. ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಲು ಯಾವುದೇ ಮಾನದಂಡ ಹಾಗೂ ಪೂರ್ವ ಸಿದ್ಧತೆಗಳಿಲ್ಲ. ಜಿಲ್ಲಾ ಕೇಂದ್ರದ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.

ಬಿಜೆಪಿ ಮುಖಂಡ ಧೀರಜ್ ಮುನಿರಾಜ್, ನಗರಸಭಾ ಸದಸ್ಯ ಎಚ್.ಎಸ್. ಶಿವಶಂಕರ್ ಮಾತನಾಡಿ, ಜಿಲ್ಲಾ ಕೇಂದ್ರದ ವಿಚಾರದಲ್ಲಿ ದೊಡ್ಡಬಳ್ಳಾಪುರಕ್ಕೆ ಅನ್ಯಾಯವಾಗಿರುವುದು ನಿಜ. ಇಚ್ಛಾಶಕ್ತಿ ಕೊರತೆಯಿಂದ ಅರ್ಹತೆಯಿದ್ದರೂ ದೊಡ್ಡಬಳ್ಳಾಪುರ ನಿರ್ಲಕ್ಷ್ಯಕ್ಕೆ ಒಳಪಡುತ್ತಿದ್ದು, ಈ ಬಗ್ಗೆ ಒಗ್ಗಟ್ಟಾಗಿ ಕಾನೂನಾತ್ಮಕ ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್. ಚಂದ್ರತೇಜಸ್ವಿ, ಮುಖಂಡರಾದ ಪಿ.ಎ.ವೆಂಕಟೇಶ್, ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್ ಹೋರಾಟಕ್ಕೆ ಬೆಂಬಲ ಘೋಷಿಸಿದರು. 

ನಗರದ ಜಯಚಾಮರಾಜೇಂದ್ರ ವೃತ್ತದ ಬಳಿಯ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ನಮ್ಮ ಹೋರಾಟದ ಕೂಗು, ರಾಜಧಾನಿಗೆ ಮುಟ್ಟಬೇಕಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ. ಆಂಜನೇಯ, ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದರು.

ಸಭೆಯಲ್ಲಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘ, ಶಿವರಾಜ್‍ಕುಮಾರ್ ಸೇನಾ ಸಮಿತಿ, ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು, ಕರವೇ, ರೈತ ಸಂಘ, ದಲಿತ ಸಂಘಟನೆ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.