ಶನಿವಾರ, ಫೆಬ್ರವರಿ 22, 2020
19 °C

ಆಸ್ತಿ ವಿವಾದ: ಹಲ್ಲೆಗೆ ಒಳಗಾಗಿದ್ದ ವೈ.ನಾಗರಾಜ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಲ್ಲೆಗೆ ಒಳಗಾಗಿದ್ದ ಗುಮ್ಮನಹಳ್ಳಿ ಗ್ರಾಮದ ವೈ.ನಾಗರಾಜ್ (50) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಹಲ್ಲೆಗೆ ಒಳಗಾದ ವ್ಯಕ್ತಿಯ ಸಂಬಂಧಿಗಳು ದೂರು ನೀಡಿದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

‘ನ. 7ರಂದು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೈ.ನಾಗರಾಜ್ ಹಾಗೂ ಕೆಂಪೇಗೌಡ ಎಂಬುವವರ ನಡುವೆ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಗುಮ್ಮನಹಳ್ಳಿ ಗ್ರಾಮದವರೇ ಆದ ಕೆಂಪೇಗೌಡ ಹಾಗೂ ಆತನ ಮಗ ವಿಜಯಕುಮಾರ್ ಎಂಬುವವರು ಹಲ್ಲೆ ನಡೆಸಿದ ಕಾರಣ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆರೋಪಿಗಳನ್ನು ಬಂಧಿಸಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.

ಸೋಮವಾರ ರಾತ್ರಿ 2 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಸಾವನಪ್ಪಿದ ವಿಷಯ ಗ್ರಾಮದಲ್ಲಿ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಬಂಧಿಸದೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸರ್ಕಲ್‍ ಇನ್‌ಸ್ಪೆಕ್ಟರ್ ರಾಘವ ಎಸ್.ಗೌಡ, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರ ಪರಿಸ್ಥಿತಿ ತಿಳಿಗೊಂಡಿದೆ. ಹಲ್ಲೆ ನಡೆಸಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)