ಶುಕ್ರವಾರ, ನವೆಂಬರ್ 22, 2019
20 °C

ಮುಕ್ತ ವ್ಯಾಪಾರ ಒಪ್ಪಂದ ವಿರುದ್ಧ ನಾಳೆ ಪ್ರತಿಭಟನೆ

Published:
Updated:

ದೇವನಹಳ್ಳಿ: ಕೇಂದ್ರ ಸರ್ಕಾರ ವಿದೇಶಿ ಉತ್ಪನ್ನಗಳಿಗೆ ಬೆಂಬಲವಾಗಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಸಜ್ಜುಗೊಳ್ಳುತ್ತಿದ್ದು ಇದನ್ನು ವಿರೋಧಿಸಿ ನ.4 ರಂದು ಇಲ್ಲಿನ ತಾಲ್ಲೂಕು ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎನ್.ವೀರಣ್ಣ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರತಿಭಟನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಪ್ರಾದೇಶಿಕ ಸಮಗ್ರ ಆರ್ಥಿಕ ನೀತಿ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕುವುದರಿಂದ 30 ರಿಂದ 35 ಲಕ್ಷ ಕುಟುಂಬಗಳು ಬೀದಿಪಾಲಾಗಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆ, ಹೈನುಗಾರಿಕೆ, ಆಡಿಕೆ, ತೆಂಗು ಸೇರಿ 28 ಕ್ಕೂ ಹೆಚ್ಚು ಉತ್ಪನ್ನಗಳನ್ನು ಬೆಳೆಯುವ ಹತ್ತು ಕೋಟಿ ಕುಟುಂಬಗಳು ಬೀದಿ ಪಾಲಾಗಲಿವೆ ಎಂದು ದೂರಿದರು.

ರಾಜ್ಯದಲ್ಲಿ ಒಂದು ದಿನಕ್ಕೆ ಸರಾಸರಿ 83 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಈ ಒಪ್ಪಂದ ಜಾರಿಯಾದರೆ ಒಂದು ಲೀಟರ್‌ ಹಾಲನ್ನು ₹10 ರಿಂದ 15ಕ್ಕೆ ಕೇಳುವವರಿಲ್ಲದ ಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ ಚಿಲ್ಲರೆ ಹಾಲು ಮಾರಾಟ ಪ್ರತಿ ಲೀಟರ್‌ಗೆ ₹40 ಇದೆ. ಒಪ್ಪಂದದಿಂದ ಆರ್ಥಿಕ ಪ್ರಗತಿಯಲ್ಲಿ ಹಿಂದುಳಿದಿರುವ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಬಹು ರಾಷ್ಟ್ರೀಯ ಕಂಪನಿಗಳನ್ನು ತೃಪ್ತಿಪಡಿಸಲು ಈ ಒಪ್ಪಂದ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ದೂರಿದರು. ಪ್ರಾಂತ ರೈತ ಸಂಘ ತಾಲ್ಲೂಕು ಘಟಕ ಅಧ್ಯಕ್ಷ ಜಿ.ವೆಂಕಟೇಗೌಡ, ಉಪಾಧ್ಯಕ್ಷ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ನಂಜೇಗೌಡ, ಮುಖಂಡ ಹನುಮಂತರಾಯಪ್ಪ ಇದ್ದರು.

ಪ್ರತಿಕ್ರಿಯಿಸಿ (+)