ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಆನೇಕಲ್: ಕೇಂದ್ರದ ನೀತಿ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಕೇಂದ್ರ ಸರ್ಕಾರ ರೈತರ ಮತ್ತು ಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿಸುವ ಇಚ್ಛಾಶಕ್ತಿ ತೋರುತ್ತಿಲ್ಲ. ಇದರ ಪರಿಣಾಮವಾಗಿ ರೈತರು ದೆಹಲಿಯಲ್ಲಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ, ಕಾರ್ಮಿಕರ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಡಿ. ಮಹದೇಶ್‌ ಒತ್ತಾಯಿಸಿದರು.

ಪಟ್ಟಣದಲ್ಲಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

1942ರ ಆ. 9ರಂದು ಕ್ವಿಟ್‌ ಇಂಡಿಯ ಚಳವಳಿ ನಡೆದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಸ್ವಾತಂತ್ರ್ಯದ ಚಳವಳಿ ತೀವ್ರತೆ ಪಡೆಯಿತು. ರೈತ ವಿರೋಧಿ ಶಾಸನಗಳು, ಕಾರ್ಮಿಕ ವಿರೋಧಿ, ಶಿಕ್ಷಣ ಮತ್ತು ಆರೋಗ್ಯದ ವ್ಯಾಪಾರೀಕರಣ ಹಾಗೂ ಬೆಲೆ ಏರಿಕೆಯಿಂದಾಗಿ ಇಂದು ಸೇವ್‌ ಇಂಡಿಯಾ ಚಳವಳಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆ, ಸಮಾನ ಶಿಕ್ಷಣ, 200 ದಿನಗಳ ಉದ್ಯೋಗ ಖಾತ್ರಿ ಸೇರಿದಂತೆ ಕಾರ್ಮಿಕರಿಗೆ, ರೈತರಿಗೆ, ಕೂಲಿಕಾರರಿಗೆ ಭದ್ರತೆ ನೀಡಬೇಕಾಗಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎನ್‌. ಮಂಜುನಾಥ್‌ ಮಾತನಾಡಿ, ಕೋವಿಡ್‌ ಸಂಕಷ್ಟದಿಂದಾಗಿ ಜನರ ಬದುಕು ತೀವ್ರ ತೊಂದರೆಗೆ ಸಿಲುಕಿದೆ. ಪ್ರತಿ ಕುಟುಂಬಕ್ಕೆ ₹ 10 ಸಾವಿರ ನೇರ ನಗದು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಹಲವು ಹೋರಾಟಗಳನ್ನು ನಡೆಸಿದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿದರು.

ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ, ಬೇಳೆ, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸಿಲಿಂಡರ್‌ ಬೆಲೆ  ಗಗನಕ್ಕೇರಿದೆ. ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಮೂಲಕ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ತಡೆಯಬಹುದಾಗಿದೆ. ಆದರೆ, ಜನರ ಬದುಕಿಗೆ ಆಸರೆಯಾಗಿರುವ ದಿನಬಳಕೆ ವಸ್ತುಗಳ ಬೆಲೆ ಇಳಿಕೆಯ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿವೆ ಎಂದು ಟೀಕಿಸಿದರು.

ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ದೇಶದಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆದಿವೆ. ಬೇಡಿಕೆಗಳ ಈಡೇರಿಕೆಯಾಗುವವರೆಗೂ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ಕಾರ್ಯಕರ್ತರು ಪಟ್ಟಣದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಿಐಟಿಯು ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್‌, ಪಿ. ಸುರೇಶ್, ಸುನೀಲ್‌, ಹನುಮಯ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.