ಶುಕ್ರವಾರ, ಸೆಪ್ಟೆಂಬರ್ 20, 2019
21 °C
ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ  

Published:
Updated:
Prajavani

ದೊಡ್ಡಬಳ್ಳಾಪುರ: ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬುಧವಾರ ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಸದಸ್ಯ ಆರ್‌.ಜಿ.ವೆಂಕಟಾಚಲಯ್ಯ ಮಾತನಾಡಿ, ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಅಧಿಕಾರಿಗಳು ಕೇಳಿರುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದರೂ ಸಮರ್ಪಕ ಉತ್ತರ ನೀಡುತ್ತಿಲ್ಲ ಎನ್ನುವ ನೆಪವೊಡ್ಡಿ ಡಿಕೆಶಿ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್‌ ಮುಖಂಡರನ್ನು ಬಂಧಿಸಿರುತ್ತಿರುವ ಕ್ರಮ ರಾಜಕೀಯ ಪ್ರೇರಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಯಾರೂ ಭ್ರಷ್ಟರೇ ಇಲ್ಲ ಎನ್ನುವಂತೆ ಇತ್ತೀಚೆಗೆ ಕಾಂಗ್ರೆಸ್‌ ಮುಖಂಡರನ್ನು ಮಾತ್ರ ಬಂಧಿಸಲಾಗುತ್ತಿದೆ. ರಾಜ್ಯದಲ್ಲಿ ತಮ್ಮದೇ ಪಕ್ಷ ಆಡಳಿತದಲ್ಲಿದ್ದಾಗಲೂ ಮುಖ್ಯಮಂತ್ರಿ ಸೇರಿದಂತೆ ಹಲವಾರು ಜನರನ್ನು ಭ್ರಷ್ಟಾಚಾರ ಆರೋಪದ ಮೇಲೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇವರು ಮಾತ್ರ ಇಂದಿಗೂ ಯಾವುದೇ ವಿಚಾರಣೆಗೂ ಹಾಜರಾಗುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಮುಖಂಡರನ್ನು ಮಾತ್ರ ಗುರಿಯಾಗಿರಿಸಿಕೊಂಡು ಬಂಧಿಸಲಾಗುತ್ತಿದೆ ಎಂದು ದೂರಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಎಲ್ಲೋ ಸಿಕ್ಕಿರುವ ₹8.60 ಕೋಟಿಯನ್ನು ತಮ್ಮದೆಂದು ಒಪ್ಪಿಕೊಳ್ಳುವಂತೆ ಡಿಕೆಶಿ ಅವರ ಮೇಲೆ ಒತ್ತಡ ಹಾಕುತ್ತ ಐಟಿ ಮತ್ತು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುವ ವೇಳೆ ಕೋಲಾರದ ಶ್ರೀನಿವಾಸ್‍ಗೌಡ ₹5 ಕೋಟಿ ಹಣ ತಂದು ರಾಜಿನಾಮೆ ನೀಡಿ ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದರು ಎಂದು ಸದನದಲ್ಲಿ ಆರೋಪಿಸಿದ್ದರು.ಆದರೆ ಈ ವಿಚಾರದ ಕುರಿತು ಯಾರೂ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಪಕ್ಷದ ವಹಿಸಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ಕಾರಣ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಷಡ್ಯಂತ್ರದಿಂದ ಬಂಧನ ಮಾಡಲಾಗಿದೆ. ಈ ಕುರಿತು ಪ್ರತಿಭಟನೆ ಮುಂದುವರೆಯಲಿದೆ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಅಶೋಕ್, ಕಸಬಾ ಬ್ಲಾಕ್‌ ಅಧ್ಯಕ್ಷ ವೆಂಕಟೇಶ್‌, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಎಂ.ಬೈರೇಗೌಡ, ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌, ಮುಖಂಡರಾದ ತಿ.ರಂಗರಾಜು, ಎಂ.ಗೋವಿಂದರಾಜು, ಟಿ.ರಾಮಣ್ಣ, ಮಹಿಳಾ ಕಾಂಗ್ರೆಸ್‌ ಮುಖಂಡರಾದ ರೇವತಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Post Comments (+)