ಗುರುವಾರ , ಜುಲೈ 29, 2021
22 °C

ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 13 ಪರೀಕ್ಷಾ ಕೇಂದ್ರಗಳಲ್ಲಿ ಜೂನ್‌18ರಂದು ದ್ವಿತೀಯ ಪಿಯು ಇಂಗ್ಲಿಷ್‌ ಭಾಷಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಅಗತ್ಯ ಇರುವ ಎಲ್ಲ ಸಿದ್ಧತೆ  ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿ, ಜಿಲ್ಲೆಯ 13 ಪರೀಕ್ಷಾ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಶುಚಿತ್ವ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗ ಸೂಚಿಯಂತೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರದಲ್ಲಿ  ವೈದ್ಯಕೀಯ ನೆರವಿನ ವ್ಯವಸ್ಥೆ ಇರಲಿದೆ. ಆರೋಗ್ಯ ಸಹಾಯಕರು ಪರೀಕ್ಷೆ ಪ್ರಾರಂಭದಿಂದ ಕೊನೆ ತನಕ ಅಗತ್ಯ ಔಷಧ ಮತ್ತು ಪ್ರಥಮ ಚಿಕಿತ್ಸೆ ಸಲಕರಣೆಯೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್‍ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಲಾಗುವುದು. ಅನಾರೋಗ್ಯದ ಲಕ್ಷಣ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ ಎಂದರು.

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಮತ್ತು ಶ್ರೀದೇವರಾಜ ಅರಸು ಪದವಿ ಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಗತಿ ಪದವಿ ಪೂರ್ವ ಕಾಲೇಜು, ಹೊಸಕೋಟೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ನಂದಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ನೆಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪದವಿ ಪೂರ್ವ ಕಾಲೇಜು, ಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜು, ತ್ಯಾಮಗ್ಲೊಂಡು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿ ರಸ್ತೆಯಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸಮೀಪದಲ್ಲೇ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎರಡು ಕಡೆಯೂ ಸೇರಿ 22 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳು ಮಾತ್ರ ಇರಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.