ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನವಶ್ಯಕ ಓಡಾಡುವವರಿಗೆ ಕ್ವಾರಂಟೈನ್‌ :ಉಸ್ತುವಾರಿ ಸಚಿವ ಅಶೋಕ್‌ ಎಚ್ಚರಿಕೆ

ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
Last Updated 26 ಏಪ್ರಿಲ್ 2020, 12:32 IST
ಅಕ್ಷರ ಗಾತ್ರ

ದೇವನಹಳ್ಳಿ: ರಸ್ತೆಗಳಲ್ಲಿ ಅನವಶ್ಯಕವಾಗಿ ಓಡಾಡುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರು ಎಚ್ಚರಿಸಿದರು.

ಹೊಸಕೋಟೆ ನಗರದಲ್ಲಿರುವ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಬಹಳಷ್ಟು ಜನರು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮರೆತಿದ್ದು, ಬೇಜವಾಬ್ದಾರಿಯಿಂದ ಸಂಚರಿಸುತ್ತಿದ್ದಾರೆ. ಇದರ ಕಡಿವಾಣ
ಕ್ಕಾಗಿ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಂತಹ ವ್ಯಕ್ತಿಗಳನ್ನು ಕಡ್ಡಾಯವಾಗಿ ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಹೇಳಿದರು.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಓಡಾಟವನ್ನು ನಿರ್ಬಂಧಿಸಿದ್ದರೂ, ಸಾಕಷ್ಟು ಜನರು ಅನಗತ್ಯವಾಗಿ ಓಡಾಡುತ್ತಿದ್ದಾರೆ. ಅವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೂ, ಎಚ್ಚರಿಕೆಯನ್ನು ಪಾಲಿಸುತ್ತಿಲ್ಲ. ಇದನ್ನು ತಡೆಗಟ್ಟಲು, ರಾಜ್ಯದಲ್ಲೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಕಡ್ಡಾಯ ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಇದು ರಾಜ್ಯಕ್ಕೆ ಮಾದರಿ ಸಂದೇಶವಾಗಲಿದೆ ಎಂದು ಹೇಳಿದರು.

ಬೈಲನರಸಾಪುರ ಗ್ರಾಮವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲಿನ ಗ್ರಾಮಸ್ಥರಿಗೆ ಯಾವುದೇ ಅನನುಕೂಲವಾಗದಂತೆ ನೋಡಿಕೊಳ್ಳಬೇಕು. ಸೌಲಭ್ಯಗಳನ್ನು ಮನೆಬಾಗಿಲಿಗೆ ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ‘ಗ್ರಾಮಸ್ಥರಿಗೆ ಪ್ರತ್ಯೇಕ ಬ್ಯಾಂಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಗ್ರಾಮದೊಳಗೆ ಅಥವಾ ಹೊರಗೆ ಯಾರಿಗೂ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಗ್ರಾಮಕ್ಕೆ ದೊಡ್ಡಬಳ್ಳಾಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಅವರು ಗ್ರಾಮದ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಬೈಲನರಸಾಪುರ ಮತ್ತು ಕೋಡಿಪಾಳ್ಯ ಗ್ರಾಮದಲ್ಲಿ ಸೀಲ್ ಡೌನ್ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಇರಬೇಕು. ಈಗಾಗಲೇ ಕೋವಿಡ್‌ ಸೋಂಕು ದೃಢಪಟ್ಟ ಬೈಲನರಸಾಪುರ ಗ್ರಾಮದ ನಾಲ್ವರಲ್ಲಿ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇನ್ನು ಉಳಿದ ಮೂವರು ವ್ಯಕ್ತಿಗಳಿಗೆ ಕೋವಿಡ್‌ ಇದೆ. ಸೋಂಕು ನಿಯಂತ್ರಣಕ್ಕಾಗಿ ಶ್ರಮವಹಿಸುತ್ತಿರುವ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರೂ ಶ್ರಮ ಹಾಕುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶಾಸಕ ಶರತ್ ಕುಮಾರ್ ಬಚ್ಚೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುಳಾದೇವಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT