ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸಿ, ಎಸ್ಟಿ ದೌರ್ಜನ್ಯ: 41 ಸಂತ್ರಸ್ತರಿಗೆ ಪರಿಹಾರ

ಸಮಾಜ ಕಲ್ಯಾಣ ಇಲಾಖೆಯ ತ್ರೈಮಾಸಿಕ ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
Last Updated 29 ಡಿಸೆಂಬರ್ 2022, 3:18 IST
ಅಕ್ಷರ ಗಾತ್ರ

ದೇವನಹಳ್ಳಿ: ಎಸ್‌.ಸಿ ಮತ್ತು ಎಸ್‌.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿ 43 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 16 ಪ್ರಕರಣಗಳ ಜಾರ್ಜ್‌ಶಿಟ್‌ ಸಲ್ಲಿಕೆಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.

ತಾಲ್ಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜನವರಿಯಿಂದ ನವೆಂಬರ್ ವರೆಗೆ 43 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 41 ಸಂತ್ರಸ್ತರಿಗೆ ₹60.92 ಲಕ್ಷ ಪರಿಹಾರಧನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಆರ್‌.ಲತಾ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡಬೇಕು. ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರವಾಗಿ ಪ್ರಕರಣ ಇತ್ಯರ್ಥಗೊಳಿಸಬೇಕು’ ಎಂದು ಹೇಳಿದರು.

ಜನಸಾಮಾನ್ಯರ ಸಮಸ್ಯೆಗಳನ್ನು ಕೂಲಂಕುಷವಾಗಿ ಆಲಿಸಿ, ಪ್ರಾಥಮಿಕ ಹಂತದಲ್ಲಿಯೇ ಬಗೆಹರಿಸಲು ಕ್ರಮ ವಹಿಸಬೇಕೆಂದು
ಸೂಚಿಸಿದರು.

ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು. ಸಭೆಗಳನ್ನು ನಡೆಸುವುದರಿಂದ ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದಾಗಿದೆ. ಸಮಸ್ಯೆಗಳಿರುವ ಸ್ಥಳಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕ್ಷೇತ್ರ ಭೇಟಿ ಮಾಡಬೇಕು, ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಜಿಲ್ಲಾ ಹಂತದಲ್ಲಿ ಪ್ರಸ್ತಾಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು. ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು
ಎಂದರು.

ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೊನಿಗಳ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು. ವಸತಿ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಡಿವೈಎಸ್ಪಿ‌ಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರುಗಳು,
ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT