ಗಡಿಗ್ರಾಮಗಳ ಅಭಿವೃದ್ಧಿಗೆ ವಿಶೇಷ ಅನುದಾನ: ಶಾಸಕ ಬಿ.ಶಿವಣ್ಣ

ಆನೇಕಲ್: ತಾಲ್ಲೂಕಿನ ಗಡಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಮಂಜೂರು ಮಾಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸರ್ಕಾರದ ಎಲ್ಲಾ ಇಲಾಖೆಗಳ ಅನುದಾನವನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ಕ್ರಿಯಾ ಯೋಜನೆ ತಯಾರಿಸಬೇಕು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಅವರು ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡನಹಳ್ಳಿ ಗ್ರಾಮದಲ್ಲಿ 25ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸಮಂದೂರು ಗ್ರಾಮ ಪಂಚಾಯಿತಿ ಗಡಿ ಗ್ರಾಮ ಪಂಚಾಯಿತಿಯಾಗಿದ್ದು ಆದಾಯ ಕಡಿಮೆಯಿದೆ. ಹಾಗಾಗಿ ಸಂಪನ್ಮೂಲಗಳ ಕ್ರೋಡೀಕರಣ ಮಾಡಿಕೊಂಡು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಎಲ್ಲ ಗ್ರಾಮಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಸಹಕಾರ ನೀಡಲಾಗುವುದು. ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯಾಗಿದೆ. ಗೆರಟಿಗನಬೆಲೆ ಗ್ರಾಮವನ್ನು ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಗೆ ಆಯ್ಕೆ ಮಾಡಲಾಗಿದ್ದು ₹1ಕೋಟಿ ಅನುದಾನ ಮಂಜೂರಾಗಿದೆ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ವಿ.ರೆಡ್ಡಿ ಮಾತನಾಡಿ, ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ತಿಮ್ಮಸಂದ್ರ ಗ್ರಾಮದಲ್ಲಿ ₹10ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ಮಂಜೂರಾಗಿದೆ. ಹೊಂಪಲಘಟ್ಟ, ಕೆಂಪೇಗೌಡ ನಗರ, ಗೆರಟಿಗನಬೆಲೆ, ಸಮಂದೂರು, ಗುಡ್ಡನಹಳ್ಳಿ, ಮುತ್ತಗಟ್ಟಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಪುಷ್ಪರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಮೂರ್ತಿ, ನಾಗರಾಜು, ವೆಂಕಟೇಶ್, ಕೃಷ್ಣಪ್ಪ, ಶಿವಮ್ಮ, ಮುರಳಿ, ಗೋವಿಂದರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಮುಖಂಡರಾದ ಕೆಂಪರಾಜು, ಚಿಕ್ಕರೇವಣ್ಣ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.