ಭಾನುವಾರ, ಮಾರ್ಚ್ 26, 2023
24 °C

ಅಧಿಕಾರ ಹಿಡಿಯಲು ಶ್ರಮಿಸಿ: ಶಾಸಕ ನಿಸರ್ಗ ನಾರಾಯಣಸ್ವಾಮಿ ಕಿವಿಮಾತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ‘2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಸಲಹೆ ನೀಡಿದರು. 

ತಾಲ್ಲೂಕಿನ ಆವತಿ ಗ್ರಾಮದ ಬಸ್‌ನಿಲ್ದಾಣದಲ್ಲಿ ಭಾನುವಾರ ಆಯೋಜಿಸಿದ್ದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ರೈತರ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಗಮನಿಸಿರುವ ಜನತೆ, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ಗೆ 130ಕ್ಕೂ ಹೆಚ್ಚು ಸ್ಥಾನಗಳನ್ನು ಕೊಟ್ಟು ಸ್ವಂತ ಬಲದ ಮೇಲೆ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ನೀಡಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಬೇಕು. ಪ್ರತಿಯೊಬ್ಬ ಕಾರ್ಯಕರ್ತರಿಗೆ ಅಧಿಕಾರ ಸಿಗಬೇಕು. ಸ್ಥಳೀಯ ಸಮಸ್ಯೆಗಳನ್ನು ಬೂತ್ ಕಮಿಟಿಯಲ್ಲೆ ಚರ್ಚಿಸಿ ಬಗೆಹರಿಸಿಕೊಂಡು ಹೋಗಲು ಸಹಕಾರಿಯಾಗಲಿದೆ. ಪಕ್ಷದ ಕಾರ್ಯಕರ್ತರು ಧೃತಿಗೆಡುವುದು ಬೇಡ. ಬೇರುಮಟ್ಟದಿಂದಲೇ ಪಕ್ಷ  ಸಂಘಟಿಸಿ ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿ, ಪಕ್ಷದ ತತ್ವ, ಸಿದ್ಧಾಂತ ಕುರಿತು ಪ್ರತಿಯೊಬ್ಬ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಪಕ್ಷ ಇದ್ದರೆ ಮಾತ್ರವೇ ನಾವೆಲ್ಲರೂ ಇರುತ್ತೇವೆ ಎಂದು ಹೇಳಿದರು.

ಆವತಿ ಬೂತ್ ಮಟ್ಟದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡದೆ ಹೋದರೆ ಮುಂಬರುವ ಚುನಾವಣೆಗಳನ್ನು ಎದುರಿಸುವುದು ಕಷ್ಟವಾಗುತ್ತದೆ. ಯುವಜನರು ಪಕ್ಷದ ಜೀವಾಳವಾಗಬೇಕು. ಮಹಿಳೆಯರನ್ನು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದರು.

ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಹೊರತುಪಡಿಸಿದರೆ ಜನರಿಗೆ ನ್ಯಾಯ ಕೊಡಲಿಕ್ಕೆ ಯಾವ ಪಕ್ಷದಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿ ಅವರ ಕಾರ್ಯವೈಖರಿ ನಮಗೆ ಮಾದರಿಯಾಗಬೇಕು. ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿಸುವಂತಹ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್ ತಾಲ್ಲೂಕು ಉಪಾಧ್ಯಕ್ಷ ವಿ. ಹನುಮಂತಪ್ಪ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ರವೀಂದ್ರ, ಕಲ್ಯಾಣ್ ಕುಮಾರ್ ಬಾಬು, ಕಾರ್ಯದರ್ಶಿ ಶೈಲಜಾ, ಅಸೀಫ್, ಖಜಾಂಚಿ ಎಸ್. ಮಹೇಶ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲ್ಲೂಕು ಸೊಸೈಟಿ ಅಧ್ಯಕ್ಷ ಸಿ.ಎಂ. ನಾರಾಯಣಸ್ವಾಮಿ, ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷ ಎಸ್. ಗುರ್ರಪ್ಪ, ಎಪಿಎಂಸಿ ನಿರ್ದೇಶಕ ಕೆ.ವಿ. ಮಂಜುನಾಥ್, ಮಾಳಿಗೇನಹಳ್ಳಿ ಎಂಪಿಸಿಎಸ್ ಮಾಜಿ ಅಧ್ಯಕ್ಷ ವೆಂಕಟೇಶ್ ಮೂರ್ತಿ, ರಾಮಣ್ಣ, ವೆಂಕಟೇಶ್, ತಿಮ್ಮರಾಯಪ್ಪ, ಗ್ರಾ.ಪಂ. ಸದಸ್ಯರಾದ ಜಾಗ್ವಾರ್ ಮಂಜುನಾಥ್, ನಾಗವೇಣಿ, ಮೋಹನ್, ಮುಖಂಡರಾದ ರಾಮಚಂದ್ರ, ಮುನಿರಾಜು, ಮಾಳಿಗೇನಹಳ್ಳಿ ಮುನಿರಾಜು, ಹರೀಶ್, ನಾಗರಾಜ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು