ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ’

ಆನೇಕಲ್‌ ಸರ್ಕಾರಿ ಹೊಸ ಪ್ರಾಥಮಿಕ ಶಾಲಾ ಆವರಣದಲ್ಲಿ ವಿಜ್ಞಾನ ಮೇಳ
Last Updated 30 ಜನವರಿ 2019, 16:30 IST
ಅಕ್ಷರ ಗಾತ್ರ

ಆನೇಕಲ್: ‘ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಒಂದು ಭಾಗವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನ ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವ ಕೊಡುಗೆಗಳನ್ನು ನೀಡಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ರಮೇಶ್ ತಿಳಿಸಿದರು.

ಪಟ್ಟಣದ ಸರ್ಕಾರಿ ಹೊಸ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ‘ವಿಜ್ಞಾನ ಮೇಳ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದರಿಂದ ಭವಿಷ್ಯ ಉಜ್ವಲವಾಗುತ್ತದೆ. ಶಿಕ್ಷಕರು ಕ್ರಿಯಾತ್ಮಕ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರೌಢಶಾಲಾ ಹಂತದಿಂದಲೇ ಅವರನ್ನು ಪ್ರಾಜೆಕ್ಟ್ ಸೇರಿದಂತೆ ವಿವಿಧ ಬಗೆಯ ಪಠ್ಯೇತರ ಚಟುವಟಿಕೆಗಳಿಗೂ ಸಿದ್ಧಗೊಳಿಸಬೇಕು’ ಎಂದರು.

‘ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಬಾಲ್ಯದಿಂದಲೇ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಬಹುದು. ಹೊಸ ಹೊಸ ವಿಚಾರಗಳನ್ನು ಸಂಶೋಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು’ ಎಂದರು.

‘ಇತ್ತೀಚೆಗೆ ಉನ್ನತ ಸಾಧನೆ ಮಾಡಿ ಖ್ಯಾತಿ ಗಳಿಸಿರುವ ಪ್ರತಾಪ್‌ನ ಡ್ರೋನ್ ಸಾಧನೆ ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಬೇಕು. ನವೀನ ಶೋಧನೆಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ಅಗಸ್ತ್ಯ ಪ್ರತಿಷ್ಠಾನ ಆಯೋಜಿಸಿರುವ ವಿಜ್ಞಾನ ಮೇಳವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.

ವಿಜ್ಞಾನ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್ ಮಾತನಾಡಿ,‘ವಿಜ್ಞಾನದ ವಿಷಯ ಕಷ್ಟ ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿದೆ. ಆದರೆ, ಈ ಭಾವನೆಯಿಂದ ಹೊರಬರಲು ವಿಜ್ಞಾನ ಮೇಳ ಆಯೋಜಿಸಲಾಗಿದೆ. ವಿದ್ಯಾರ್ಥಿಗಳೇ ಸಿದ್ಧಪಡಿಸಿರುವ ವಿಜ್ಞಾನ ಪ್ರಾಯೋಗಿಕ ಮಾದರಿಗಳನ್ನು ತಯಾರಿಸಿದ್ದು ಹೊಸ ಸಂಶೋಧನೆಗೆ ನಾಂದಿ ಹಾಡಲು ವಿಜ್ಞಾನ ಮೇಳ ಸಹಕಾರಿಯಾಗಲಿದೆ. ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸುವುದರಿಂದ ಕ್ರಿಯಾಶೀಲತೆ ಹೆಚ್ಚುತ್ತದೆ’ ಎಂದರು.

ಆನೇಕಲ್‌ನ ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಂದ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಜ್ಞಾನ ಮೇಳಕ್ಕೆ ಭೇಟಿ ನೀಡಿ ವಿಜ್ಞಾನದ ಮಾದರಿಗಳನ್ನು ವೀಕ್ಷಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ವಿಜ್ಞಾನ ಮೇಳದಲ್ಲಿ ಪ್ರಾಯೋಗಿಕ ಮಾದರಿಗಳನ್ನು ಸಿದ್ಧಪಡಿಸಿ ಮಾಹಿತಿ ನೀಡಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎನ್.ಶಂಕರಮೂರ್ತಿ, ಶಿಕ್ಷಕ ಸಂಯೋಜಕ ಸಾದಿಕ್ ಅಹಮದ್, ಸಮೂಹ ಸಂಪನ್ಮೂಲ ವ್ಯಕ್ತಿ ಮಹದೇವಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT