ಭಾನುವಾರ, ಸೆಪ್ಟೆಂಬರ್ 19, 2021
24 °C

ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಅನುಮೋದನೆ ಪಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಸವರಾಜು ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಚಾಲಕರು ಹಾಗೂ ಪ್ರಯಾಣಿಕರ ಸುರಕ್ಷತೆಗೆ ಕ್ರಮ ವಹಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಸ್ತೆ ಸುರಕ್ಷತೆ ಕ್ರಿಯಾ ಯೋಜನೆಯ ಅಗತ್ಯತೆ ಇದೆ ಎಂದು ಹೇಳಿದರು.

ರಸ್ತೆ ನಿರ್ಮಾಣ ಮಾಡುವ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಅಂದಾಜು ಪಟ್ಟಿ ಸಲ್ಲಿಸುವ ವೇಳೆ ರಸ್ತೆ ಸುರಕ್ಷತೆಗೆ ಹೆಚ್ಚುವರಿ ಅನುದಾನ ಮೀಸಲಿಡಲು ಅವಕಾಶ ಕಲ್ಪಿಸಿಕೊಳ್ಳಬೇಕು, ಸರಕುಗಳನ್ನು ಹೊತ್ತೊಯ್ಯುವ ಆಟೋ, ಟ್ರ್ಯಾಕ್ಟರ್, ಟೆಂಪೋಗಳು ಹಾಗೂ ಇತರೆ ವಾಹನಗಳಲ್ಲಿ ಕೂಲಿ ಕಾರ್ಮಿಕರು, ಕಾರ್ಖಾನೆಗಳ ಉದ್ಯೋಗಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಾಗಾಟ ಮಾಡುತ್ತಿರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದರು.

ಅಂತಹ ಸರಕು ವಾಹನಗಳನ್ನು ವಶಕ್ಕೆ ಪಡೆದು ಕಠಿಣ ಕ್ರಮ ವಹಿಸಬೇಕು. ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎಸ್. ಕರೀಗೌಡ ಮಾತನಾಡಿ, ಜಿಲ್ಲೆಯ ಕೈಗಾರಿಕಾ ಮಾಲೀಕರು, ಕಾರ್ಮಿಕರು, ಗಾರ್ಮೆಂಟ್ಸ್ ಉದ್ಯೋಗಿಗಳು, ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಾಲ್ಕು ತಾಲ್ಲೂಕುಗಳಲ್ಲಿ ರಸ್ತೆ ಸುರಕ್ಷತೆ ಜಾಥಾ ಮತ್ತು ಸಭೆಗಳನ್ನು ವಿಶೇಷ ಆಂದೋಲನ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇ 13ರಂದು ದೊಡ್ಡಬಳ್ಳಾಪುರ, ಮೇ 20ರಂದು ನೆಲಮಂಗಲ, ಮೇ 27ರಂದು ಹೊಸಕೋಟೆ ಮತ್ತು ಜೂನ್ 3ರಂದು ದೇವನಹಳ್ಳಿಯಲ್ಲಿ ಅರಿವು ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನ ಜನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಬಹಳ ಎಚ್ಚರವಹಿಸಬೇಕು. ಸಮಸ್ಯೆ ಬಂದ ಮೇಲೆ ಕ್ರಮವಹಿಸುವ ಬದಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲು ಅವಶ್ಯಕತೆ ಕಂಡುಬಂದಲ್ಲಿ ನೀರು ಸರಬರಾಜು ಮಾಡಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ರಾಜ್ಯ ಹಾಗೂ ಜಿಲ್ಲೆಯ ಹಲವೆಡೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದು, ಬೆಳೆ ಹಾಗೂ ಆಸ್ತಿ ನಷ್ಟ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ಶೀಘ್ರ ಪರಿಹಾರ ನೀಡಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಕೆರೆಗಳು ಹಾಗೂ ಮಳೆ ನೀರಿನ ಸಂರಕ್ಷಣೆ ಮಾಡುವುದರಿಂದ ಪರಿಸರವನ್ನು ಮುಂದಿನ ಜನಾಂಗಕ್ಕೆ ಸಂರಕ್ಷಿಸಿಬಹುದು ಎಂದು ಕಾರ್ಯದರ್ಶಿ ಬಸವರಾಜು ಅವರು ಹೇಳಿದರು.

ಜಿಲ್ಲಾಧಿಕಾರಿ ಕರೀಗೌಡ ಮಾತನಾಡಿ, ಸಾಕಷ್ಟು ಸಾರ್ವಜನಿಕರು ಕೆರೆಗಳ ಅಭಿವೃದ್ಧಿಗಾಗಿ ಹಣವನ್ನು ನೀಡಿದ್ದು, ನಗರ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಆರ್ಥಿಕ ವರ್ಷದ ಅಂತ್ಯದವರೆಗೆ ಕಾಯುವ ಬದಲು, ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಶೀಘ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿಕೊಂಡು ಜೂನ್ 15ರೊಳಗೆ ಅನುಮೋದನೆ ಪಡೆದು, ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದರು.

ಸರಿಯಾದ ಸಮಯದಲ್ಲಿ ಕ್ರಿಯಾ ಯೋಜನೆ ಸಿದ್ಧಗೊಳ್ಳದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನ ಹಿಂದಕ್ಕೆ ಹೋಗಿವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು