ಗುರುವಾರ , ಅಕ್ಟೋಬರ್ 29, 2020
21 °C
ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ

ದೇವನಹಳ್ಳಿ: ಎಲ್ಲೆಂದರಲ್ಲಿ ತಂಬಾಕು ಸೇವನೆ ನಿಷಿದ್ಧ: ಪಿ.ಎನ್.ರವೀಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಕೋವಿಡ್–19 ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು .

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂಬಾಕು ಉತ್ಪನ್ನ ಬಳಕೆದಾರರು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿ
ಯುವಂತಿಲ್ಲ ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಭದ್ರತಾ ಕಾಯ್ದೆ ಉಲ್ಲಂಘಿಸುವ ಹೋಟೆಲ್ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. 2003ರ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಸೆಕ್ಷನ್ 4 ಮತ್ತು 6 ಬಿ ಅನ್ವಯ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಮೀ. ಅಂತರದಲ್ಲಿ ಧೂಮಪಾನ ಮಾಡುವಂತಿಲ್ಲ. ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ. ಶಾಲಾ-ಕಾಲೇಜು ಮಕ್ಕಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್ ಮಸಾಲಾ ಜಗಿಯುವವರ ವಿರುದ್ಧ ಆರೋಗ್ಯ ಇಲಾಖೆಯವರು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸುವುದರೊಂದಿಗೆ ಜಾಗೃತಿ ಮೂಡಿಸಬೇಕು. ಕೈಗಾರಿಕಾ ಪ್ರದೇಶಗಳು, ಬಸ್ ಮತ್ತು ರೈಲು ನಿಲ್ದಾಣ, ಶಾಲಾ-ಕಾಲೇಜು ಆವರಣ ಮತ್ತು ಸರ್ಕಾರಿ ಕಚೇರಿ ಆವರಣಗಳು ಈ ನಿಯಮ ಅನ್ವಯವಾಗಲಿದೆ ಎಂದು ಹೇಳಿದರು.

ತಂಬಾಕು ಸೇವನೆಯಿಂದಾಗಿ ಉಂಟಾಗುವ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ, ಶ್ವಾಸ ಸಂಬಂಧಿ ಇತ್ಯಾದಿ ಮಾರಾಣಾಂತಿಕ ಕಾಯಿಲೆಗಳು ಬರಲಿವೆ. ಗರ್ಭಪಾತ, ಗರ್ಭಧಾರಣೆಯಲ್ಲಿ ಕುಂಠಿತ, ದಂತಕ್ಷಯ ರೋಗ ಸೇರಿದಂತೆ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸುವ ಶಿಬಿರಗಳನ್ನು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ
ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು