ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಆಸ್ಪತ್ರೆ ಸೌಲಭ್ಯ ಬಳಸಿ: ಶಾಸಕ

Last Updated 9 ಸೆಪ್ಟೆಂಬರ್ 2020, 16:00 IST
ಅಕ್ಷರ ಗಾತ್ರ

ಆನೇಕಲ್: ‘ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಸೇರಿದಂತೆ ಎಲ್ಲಾ ಸೌಲಭ್ಯಗಳಿದ್ದು ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

‘ಕೊರೊನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 12 ದಿನಕ್ಕೆ 3-4 ಲಕ್ಷ ಖರ್ಚು ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಬಡವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ನಿಭಾಯಿಸುವುದು ಅತ್ಯಂತ ಕಷ್ಟವಾಗಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವ ಆಕ್ಸಿಜನ್‌ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಆನೇಕಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿದೆ. ರೋಗಿಗಳು ಭಯಭೀತರಾಗದೇ ಚಿಕಿತ್ಸೆ ಪಡೆದು ಕೊರೊನಾದಿಂದ ಮುಕ್ತರಾಗಬೇಕು. ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು’ ಎಂದರು.

‘ತಾಲ್ಲೂಕಿನಲ್ಲಿ ಐದು ಸಾವಿರ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧ ಹೋರಾಡಲು ಸ್ಪಂದಿಸಬೇಕು’ ಎಂದರು.

ನೊಡೆಲ್‌ ಅಧಿಕಾರಿ ಡಾ.ವೈಷ್ಣವಿ ಮಾತನಾಡಿ, ‘ಆನೇಕಲ್‌ ತಾಲ್ಲೂಕು ಗ್ರಾಮೀಣ ಭಾಗ. ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಕೇರ್‌ ಕೇಂದ್ರವನ್ನು ತೆರೆಯಲಾಗಿದೆ. ಅಜೀಂ ಪ್ರೇಮ್‌ಜಿ ಪ್ರತಿಷ್ಠಾನವು ಸಿಎಸ್‌ಆರ್‌ ನಿಧಿಯಿಂದ 8 ವೈದ್ಯರನ್ನು ನೀಡಿದೆ. ಈ ಹಿಂದೆ ಆನೇಕಲ್‌ ತಾಲ್ಲೂಕಿನ ಮರಣ ಪ್ರಮಾಣ ಶೇ 3.7ರಷ್ಟಿತ್ತು. ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪರಿಶ್ರಮದಿಂದ ಮರಣ ಪ್ರಮಾಣವನ್ನು ಶೇ 2.13ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊರೊನಾ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಇಲಾಖೆ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ’ ಎಂದರು.

ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ, ಸದಸ್ಯ ಎಚ್‌.ಜೆ.ಪ್ರಸನ್ನಕುಮಾರ್‌, ಜಿಲ್ಲಾ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌, ಆನೇಕಲ್‌ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಳಿನಾ, ಪುರಸಭಾ ಸದಸ್ಯರಾದ ಮುನಾವರ್‌, ರವಿಚೇತನ್‌, ರಾಜಪ್ಪ, ರವಿ, ಮಹಾಂತೇಶ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕವಿತಾ ಸಂಪತ್‌, ಉಪಾಧ್ಯಕ್ಷೆ ಚಂದ್ರಕಲಾ.ಟಿ.ವಿ.ಬಾಬು, ಮುಖಂಡರಾದ ಜಿ.ಗೋಪಾಲ್‌, ನಾಗವೇಣಿ, ರಾಜೇಂದ್ರಬಾಬು, ವಿನಯ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT