ಭಾನುವಾರ, ಮೇ 16, 2021
25 °C

ಆನೇಕಲ್: ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕೊರೊನಾ ಸೋಂಕು ತಡೆಯಲು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಈ ಮೂಲಕ ಪುರಸಭಾ ವ್ಯಾಪ್ತಿಯಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ಸಹಕರಿಸಬೇಕು ಎಂದು ಪುರಸಭಾ ಅಧ್ಯಕ್ಷ ಎನ್‌.ಎಸ್.ಪದ್ಮನಾಭ ತಿಳಿಸಿದರು.

ಅವರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಕೊರೊನಾ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು.

ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಹರಡುವಿಕೆಯ ಜಾಡನ್ನು ತುಂಡು ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಸಾರ್ವಜನಿಕರು ಅನಾವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು. ರೋಗ ಬರುವುದಕ್ಕಿಂತ ಮುಂಚಿತವಾಗಿಯೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳ್ಳೆಯದು. ಸಾಮಾಜಿಕ ಅಂತರ, ಸ್ಯಾನಿಟೈಜರ್‌ ಮತ್ತು ಮಾಸ್ಕ್ ಬಳಕೆ ಮಾಡುವ ಮೂಲಕ ಸಹಕರಿಸಬೇಕು ಎಂದರು.

ಅಂಗಡಿಗಳು ಮತ್ತು ಹೋಟೆಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪುರಸಭಾ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ದಾಖಲೆಗಳನ್ನು ತೋರಿಸಬೇಕು. ಆನೇಕಲ್‌ನ ವಿವಿಧೆಡೆ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸಾರ್ವಜನಿಕರು ಕೊರೊನಾ ತಡೆಗೆ ಸಹಕರಿಸಬೇಕು ಎಂದರು.

ಪುರಸಭಾ ಮುಖ್ಯಾಧಿಕಾರಿ ನಿಸಾರ್‌ ಅಹಮದ್‌ ಮಾತನಾಡಿ, ಪುರಸಭಾ ವತಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ತರಕಾರಿ ಮಾರುಕಟ್ಟೆಯಲ್ಲಿ ಜನರು ಗುಂಪುಗಳು ಸೇರುವುದನ್ನು ತಡೆಯಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು. ಪುರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಪರವಾನಗಿ ರದ್ದು ಪಡಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದರು.

ಪುರಸಭಾ ಸದಸ್ಯರಾದ ಮುನಾವರ್‌, ಕೃಷ್ಣ, ರವಿ, ಪುರಸಭಾ ಆರೋಗ್ಯಾಧಿಕಾರಿ ರಾಜಶೇಖರ್‌, ಮುಖಂಡ ಲಕ್ಷ್ಮೀನಾರಾಯಣ್‌ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು